ಮಕ್ಕಳಿಗೆ ಶಿಕ್ಷಣ ನೀಡುವುದು ಪಾಲಕರ ಜವಾಬ್ದಾರಿ
ಗದಗ: ಬಡ ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರ ಸಾಕಷ್ಟು ಸೌಲಭ್ಯ ನೀಡಿದೆ ಅವುಗಳ ಸದುಪಯೋಗವಾಗಬೇಕಾದರೆ ಪಾಲಕರು ತಮ್ಮ ಮಕ್ಕಳನ್ನು ಪ್ರತಿನಿತ್ಯ ಶಾಲೆಗೆ ಕಳುಹಿಸಬೇಕೆಂದು ಜಿಲ್ಲಾ ಜ್ಞಾನ ವಿಜ್ಞಾನ ಸಮಿತಿ ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದರು.
ಅವರು ಭಾನುವಾರ ತಾಲೂಕಿನ ಅಡವಿಸೋಮಾಪುರ ಗ್ರಾಮದ ಗೋಣಿಬಸವೇಶ್ವರ ದೇವಸ್ಥಾನದಲ್ಲಿ ರಾಜ್ಯ ಮಕ್ಕಳ ಶಿಕ್ಷಣ ಆಯೋಗ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಜ್ಞಾನ ವಿಜ್ಞಾನ ಸಮಿತಿ ಸಹಯೋಗದಲ್ಲಿ ಮಕ್ಕಳ ಹಕ್ಕುಗಳು ಕುರಿತು ಏರ್ಪಡಿಸಿದ್ದ ಬೀದಿ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಕ್ಕಳ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರ್ಕಾರ ಮಕ್ಕಳ ಶಿಕ್ಷಣಕ್ಕಾಗಿ ಸಾಕಷ್ಟು ಸವಲತ್ತು ನೀಡಿದೆ. ಪಾಲಕರು ತಮ್ಮ ಮಕ್ಕಳನ್ನು ಸಮೀಪದ ಶಾಲೆಗೆ ಸೇರಿಸಬೇಕು. ಮಕ್ಕಳಿಗೆ ಶಿಕ್ಷಣ ನೀಡುವುದು ಪಾಲಕರ ಜವಾಬ್ದಾರಿಯಾಗಿದ್ದು, ಈ ಕುರಿತು ಪಾಲಕರು ಹೆಚ್ಚಿನ ಕಾಳಜಿ ವಹಿಸಿ ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವಲ್ಲಿ ಪ್ರತಿಯೊಬ್ಬರೂ ಶ್ರಮಿಸುವಂತೆ ಕರೆ ನೀಡಿದರು.
ಮಕ್ಕಳ ಹಕ್ಕುಗಳು ಕುರಿತು ಜರುಗಿದ ಬೀದಿ ನಾಟಕದಲ್ಲಿ ಮಕ್ಕಳ ಶಿಕ್ಷಣ ನೀಡಿದರೆ ಅದರಿಂದ ಆಗುವ ಉಪಯೋಗಗಳನ್ನು ತಿಳಿಸಿ, ಮಕ್ಕಳಿಗೆ ಶಿಕ್ಷಣ ನೀಡುವಲ್ಲಿ ಪಾಲಕರು ಮುಂದಾಗಬೇಕು. ಶಿಕ್ಷಣ ನೀಡುವಲ್ಲಿ ಪಾಲಕರು ಗಮನಿಸಬೇಕಾದ ಅಂಶಗಳ ಬಗ್ಗೆ ತಿಳಿವಳಿಗೆ ನೀಡಿದರು. ವೀರಣ್ಣ ಅಂಗಡಿ ಸ್ವಾಗತಿಸಿ, ನಿರೂಪಿಸಿದರು. ಲಕ್ಷ್ಮಣ ದೊಡ್ಡಮನಿ ವಂದಿಸಿದರು.