ನೀತಿ ಸಂಹಿತೆ ನೆಪ: ಅನಗತ್ಯ ಕಿರುಕುಳ
ಕನ್ನಡಪ್ರಭ ವಾರ್ತೆ ಚಂಚೋಳಿ ಏ.9
ತಾಲೂಕಿನಲ್ಲಿ ಪ್ರತಿವರ್ಷ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಶ್ರಮಿಸಬೇಕಾದ ಅಧಿಕಾರಿಗಳು ಚಿಂಚೋಳಿ ಮೀಸಲು ವಿಧಾನಸಭೆ ಚುನಾವಣೆ ಘೋಷಣೆಯಾದ ಪ್ರಯುಕ್ತ ಚುನಾವಣಾ ಮಾದರಿ ನೀತಿ ಸಂಹಿತೆ ನೆಪಮೊಡ್ಡಿ ಗ್ರಾಮೀಣ ಪ್ರದೇಶದ ಜನ ಸಾಮಾನ್ಯರಿಗೆ ಅನಗತ್ಯ ಕಿರುಕುಳ ನೀಡುತ್ತಿದ್ದಾರೆ. ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದರು ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಜಿಲ್ಲಾ ಪಂಚಾಯತಿ ಸದಸ್ಯ ದೀಪಕನಾಗ ಪುಣ್ಯಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಚಿಂಚೋಳಿ ತಾಲೂಕಿನಲ್ಲಿರುವ ತಾಂಡಾ ಮತ್ತು ಹಳ್ಳಿಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಜಿಲ್ಲಾ ಪಂಚಾಯತಿಗೆ ನೀಡಿದ ಅನುದಾನದಲ್ಲಿ ಹಣ ಪ್ರತ್ಯೇಕವಾಗಿ ಮೀಸಲಿಟ್ಟು ಕ್ರಿಯಾ ಯೋಜನೆ ಸಿದ್ದಪಡಿಸಲಾಗಿದೆ. ಆದರೆ ಚುನಾವಣೆ ನೆಪ ನೀಡಿ ಕ್ರಿಯಾ ಯೋಜನೆಗೆ ಅನುಮೋದನೆ ನೀಡುವಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿದರು.
ತಾಲೂಕಿನಲ್ಲಿ ಬೇಸಿಗೆ ದಿನಗಳಲ್ಲಿ ಕುಡಿಯವ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಅಗತ್ಯ ಕ್ರಮ ಕೈಕೊಳ್ಳುವಂತೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಭೇಟಿ ಮಾಡಿ ವಿಚಾರಿಸಿದರೆ ಜಿಲ್ಲಾಧಿಕಾರಿಗೆ ಭೇಟಿ ಮಾಡುವಂತೆ ಹೇಳಿ ಪತ್ರ ಬರೆದುಕೊಟ್ಟು ಕೈ ತೊಳೆದುಕೊಳ್ಳುತ್ತಾರೆ ಎಂದರು.
ಜಿಲ್ಲಾಧಿಕಾರಿ ಚುನಾವಣಾ ಆಯೋಗದ ಅನುಮತಿ ಪಡೆದುಕೊಳ್ಳುವುದಾಗಿ ಹೇಳುತ್ತಿದ್ದಾರೆ. ಆದರೆ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡುತ್ತಿಲ್ಲ ಎಂದು ಆರೋಪಿಸಿ, ಗಡಿ ಪ್ರದೇಶ ಅಭಿವೃದ್ಧಿ ಹಣ (ಬಿಆರ್‌ಜಿಎಫ್) ಯೋಜನೆ, 13ನೇ ಹಣಕಾಸು ಯೋಜನೆ, ಟಾಸ್ಕಪೋರ್ಸ್ ಇತರ ಯೋಜನೆ ಅಡಿಯಲ್ಲಿ ಕುಡಿಯುವ ನೀರಿಗೆ ಜಿಪಂ ಸದಸ್ಯರು ಹೆಚ್ಚು ಆದ್ಯತೆ ನೀಡಿ ಕ್ರಿಯಾ ಯೋಜನೆ ತಯಾರಿಸಿದ್ದಾರೆ. ಆದರೆ, ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯಿಂದ ಗ್ರಾಮಗಳಿಗೆ ನೀರಿನ ಸೌಲಭ್ಯ ದೊರೆಯುತ್ತಿಲ್ಲ ಎಂದು ಆಪಾದಿಸಿದರು.
ಸದ್ಯ ತಾಲೂಕಿನ ಅನೇಕ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಸರ್ಕಾರವೇ ತನ್ನ ಏಜೆನ್ಸಿ ಮೂಲಕ ಕೆಲಸ ಮಾಡಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಕ್ರಮ ಕೈಕೊಳ್ಳಬೇಕೆಂದು ಜಿಪಂ ಸದಸ್ಯ ದೀಪಕನಾಗ ಪುಣ್ಯಶೆಟ್ಟಿ ಒತ್ತಾಯಿಸಿದರು.