ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಬಿಜೆಪಿ 3ನೇ ಸ್ಥಾನಕ್ಕೆ

Lingaraj Badiger
Updated On : 18 Apr 2013, 11:09 am

ಕನ್ನಡಪ್ರಭ ವಾರ್ತೆ, ಯಾದಗಿರಿ, ಏ.17
ಸದ್ಯದ ರಾಜಕೀಯ ಪರಿಸ್ಥಿತಿ ನೋಡಿದರೆ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಗುವುದಿಲ್ಲ. ಅಧಿಕಾರದಲ್ಲಿರುವ ಬಿಜೆಪಿ 3ನೇ ಸ್ಥಾನಕ್ಕೆ ಹೋಗುವುದು ನಿಶ್ಚಿತ ಎಂದು ಕೆಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಭವಿಷ್ಯ ನುಡಿದರು.
  ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಒಳಜಗಳ ಹೆಚ್ಚಾಗಿರುವ ಕಾಂಗ್ರೆಸ್‌ಗೆ ಕೊನೆ ಕ್ಷಣದವರೆಗೂ ಟಿಕೆಟ್ ಹಂಚಲು ಸಾಧ್ಯವಾಗಲಿಲ್ಲ. ಈಗಾಗಲೇ ಆ ಪಕ್ಷದಲ್ಲಿ ಸಿಎಂ ಗಾದಿಗಾಗಿ ಪೈಪೋಟಿ ಆರಂಭವಾಗಿದೆ. ಉತ್ತಮ ಆಡಳಿತ ನೀಡಿದ ನನ್ನ ಬೆನ್ನಿಗೆ ಚೂರಿ ಹಾಕಿದ ಬಿಜೆಪಿಯನ್ನು ಜನತೆ ಕ್ಷಮಿಸುವುದಿಲ್ಲ. ಇನ್ನು ಜೆಡಿಎಸ್ ಅಷ್ಟಕ್ಕಷ್ಟೆ. ಕೆಜೆಪಿಗೆ ಇದರ ಲಾಭ ಸಿಗಲಿದ್ದು, ಎಲ್ಲ ಕಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹಾಗಂತೆ ನನ್ನ ಪಕ್ಷವೇ ಅಧಿಕಾರಕ್ಕೆ ಬರುತ್ತದೆ ಎಂದು ಸುಳ್ಳು ಹೇಳುವುದಿಲ್ಲ ಎಂದರು.
ತೃತೀಯ ರಂಗ ಕುರಿತು ಮಾತುಕತೆ: ರಾಷ್ಟ್ರೀಯ ಪಕ್ಷಗಳಿಂದ ರಾಜ್ಯಗಳಿಗೆ ಸಾಮಾಜಿಕ ನ್ಯಾಯ ಸಿಗುತ್ತಿಲ್ಲ. ಆದ್ದರಿಂದ ಪ್ರಾದೇಶಿಕ ಪಕ್ಷಗಳು ಅನಿವಾರ್ಯ ಹಾಗೂ ಪ್ರಮುಖ ಪಾತ್ರ ವಹಿಸುತ್ತಿವೆ. ಲೋಕಸಭೆ ಚುನಾವಣೆ ಎದುರಿಗಿರುವುದರಿಂದ ತೃತೀಯ ರಂಗ ರಚನೆ ಅಗತ್ಯ. ಲೋಕಸಭೆ ಚುನಾವಣೆಗೆ ಪಕ್ಷ ಈಗಿನಿಂದಲೇ ತಯಾರಿ ನಡೆಸಲಿದೆ. ಆದ್ದರಿಂದ ಈ ಬಗ್ಗೆ ಮೇ 8ರ ನಂತರ ರಾಜಕೀಯ ಮಡಿವಂತಿಕೆ ಬಿಟ್ಟು, ರಾಜ್ಯದ ಹಿತ ಕಾಪಾಡಲು ಎಲ್ಲ ಪ್ರಾದೇಶಿಕ ಪಕ್ಷಗಳ ಅಧ್ಯಕ್ಷರು, ಮುಖಂಡರನ್ನು ಭೇಟಿ ಮಾಡುತ್ತೇನೆ. ಆದರೆ ಎನ್‌ಡಿಎ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದರು.

ನಾಗರತ್ನ ಕೆಜೆಪಿ ರಾಜ್ಯ ಕಾರ್ಯದರ್ಶಿ
ಯಾದಗಿರಿ: ಇಲ್ಲಿಯ ಕೆಜೆಪಿ ನಾಯಕಿ ನಾಗರತ್ನ ಆರ್. ಕುಪ್ಪಿ ಅವರನ್ನು ಕೆಜೆಪಿ ರಾಜ್ಯ ಕಾರ್ಯದರ್ಶಿಯನ್ನಾಗಿ ನಿಯುಕ್ತಿಗೊಳಿಸಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.
  ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲು ಜಿಲ್ಲೆಗೆ ಆಗಮಿಸಿದ್ದ ಯಡಿಯೂರಪ್ಪ ಅವರು ಈ ಆದೇಶ ಹೊರಡಿಸಿದ್ದಾರೆ. ರಾಜ್ಯ ಕಾರ್ಯದರ್ಶಿ ಹುದ್ದೆಯನ್ನು ತಕ್ಷಣ ವಹಿಸಿಕೊಂಡು, ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುವಂತೆ ಆದೇಶದಲ್ಲಿ ತಿಳಿಸಿದ್ದಾರೆ. ಇದಕ್ಕೆ ಕುಪ್ಪಿ ಅವರ ಅಭಿಮಾನಿಗಳು, ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement