'ಬೋರ್ವೆಲ್ ಕೊರೆಸುವ ಮುನ್ನ ಅನುಮತಿ ಪಡೆಯಿರಿ'
ಯಾದಗಿರಿ: ಜಿಲ್ಲೆಯ ಮೂರು ತಾಲೂಕುಗಳಲ್ಲಿ ಬರ ಇರುವುದರಿಂದ ಜಿಲ್ಲಾದ್ಯಂತ ಕುಡಿವ ನೀರಿನ ಸಮಸ್ಯೆಯಾಗುತ್ತಿದೆ. ಆದ್ದರಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದೆ. ಆದರೆ ಹೊಸ ಕೊಳವೆ ಬಾವಿ ಕೊರೆವ ಕಾಮಗಾರಿಗಳನ್ನು ಕೈಗೊಳ್ಳುವ ಮುನ್ನ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ಪೂರ್ವಾನುಮತಿ ಪಡೆಯಬೇಕೆಂದು ಜಿಲ್ಲಾಧಿಕಾರಿ ರಾಜೇಂದ್ರ ಜೋಳನ್ ಅವರು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಪ್ರಸ್ತುತ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಪ್ರಕ್ರಿಯೆ ನಡೆಯುತ್ತಿರುವುದರಿಂದ ಜಿಲ್ಲಾದ್ಯಂತ ಯಾವುದೇ ಗ್ರಾಮದಲ್ಲಿ ಹೊಸ ಕೊಳವೆ ಬಾವಿ ಕೊರೆಯುವ ಮುನ್ನ ಕಾರ್ಯಾಲಯದಿಂದ ಪೂರ್ವಾನುಮತಿ ಪಡೆದುಕೊಂಡ ನಂತರವೇ ಕೊಳವೆ ಬಾವಿ ಕೊರೆಯಲು ಕ್ರಮ ಕೈಗೊಳ್ಳಲು ನಿರ್ದೇಶಿಸಲಾಗಿದೆ. ಯಾವುದೇ ಕಾರಣಕ್ಕೂ ಪೂರ್ವಾನುಮತಿ ಪಡೆಯದೇ ಕಾಮಗಾರಿ ಆರಂಭಿಸಿದರೆ ಸಂಬಂಧಪಟ್ಟ ಅಭಿಯಂತರರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.