ನೀತಿ ಸಂಹಿತೆ ಉಲ್ಲಂಘನೆ 21 ಪ್ರಕರಣ
ಗುಲ್ಬರ್ಗ: ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳಿಗೆ ಮೇ 5ರಂದು ನಡೆಯುವ ಚುನಾವಣೆ ಪ್ರಯುಕ್ತ ಜಿಲ್ಲೆಯಲ್ಲಿ ಏ. 5 ರಿಂದ 22ರವರೆಗೆ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಒಟ್ಟು 21 ಪ್ರಕರಣಗಳು ದಾಖಲಾಗಿವೆ.
ಈ ಪೈಕಿ ಏ. 22ರಂದು ಕೆಳಕಂಡ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮೂರು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ಜಿ. ಜಗದೀಶ ತಿಳಿಸಿದ್ದಾರೆ.
ಗುಲ್ಬರ್ಗ ಉತ್ತರ ಮತಕ್ಷೇತ್ರದಲ್ಲಿ ಕೆಜೆಪಿ ಪಕ್ಷದ ಅಭ್ಯರ್ಥಿಯಿಂದ ಪರವಾನಿಗೆ ಇಲ್ಲದೆ ಚುನಾವಣಾ ಪ್ರಚಾರ ಮಾಡಿದ ಮತ್ತು ರಾತ್ರಿ 10 ಗಂಟೆಯ ನಂತರ ಚುನಾವಣೆ ಪ್ರಚಾರ ಮಾಡಿದ ಬಗ್ಗೆ ಗುಲ್ಬರ್ಗ ರೋಜಾ ಪೊಲೀಸ್ ಠಾಣೆಯಲ್ಲಿ ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ.
ಗುಲ್ಬರ್ಗ ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ವಾಹನದಲ್ಲಿ ನಗದು ಹಣದ ಸಾಗಾಣಿಕೆ ಬಗ್ಗೆ ಸಿಕ್ಕ ಸುಳಿವಿನ ಮೇರೆಗೆ ರು. 1,13,800 ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಹಣವನ್ನು ಗುಲ್ಬರ್ಗ ತಹಶೀಲ್ದಾರರಿಗೆ ಒಪ್ಪಿಸಲಾಗಿದೆ. ಪ್ರಕರಣವನ್ನು ಪರಿಶೀಲನೆ ನಂತರ ದಾಖಲಿಸಲಾಗುವುದು.
ಸೇಡಂ ಮತಕ್ಷೇತ್ರದ ವ್ಯಾಪ್ತಿಯಲ್ಲಿ 5 ಲೀ. ಪ್ರಮಾಣದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಸದರಿ ಮದ್ಯವನ್ನು ಮುಂದಿನ ಕ್ರಮಕ್ಕಾಗಿ ಅಬಕಾರಿ ಇಲಾಖೆಯ ವಶಕ್ಕೆ ನೀಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.