ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಜಾಹೀರಾತು: ಅನುಮೋದನೆ ಕಡ್ಡಾಯ

Rashmi Kasaragodu
Updated On : 27 Apr 2013, 10:59 am

ಗುಲ್ಬರ್ಗ: ಚುನಾವಣಾ ಜಾಹೀರಾತುಗಳನ್ನು ವಿವಿಧ ಮಾಧ್ಯಮಗಳಲ್ಲಿ ಪ್ರಸಾರ ಮಾಡುವ ಮುನ್ನ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಯಿಂದ ಕಡ್ಡಾಯವಾಗಿ ಅನುಮೋದನೆ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಕೆ.ಜಿ. ಜಗದೀಶ ಹೇಳಿದರು.
ಚುನಾವಣಾ ಆಯೋಗದ ಸೂಚನೆಯಂತೆ ಮಾಧ್ಯಮಗಳಲ್ಲಿ ಪ್ರಕಟವಾಗುವ ಸುದ್ದಿರೂಪದ ಜಾಹೀರಾತು, ಚುನಾವಣಾ ಪ್ರಚಾರ ಸಾಮಗ್ರಿ ಬಗ್ಗೆ ನಿಗಾವಹಿಸಿ ಆಯಾ ಕ್ಷೇತ್ರದ ಚುನಾವಣಾಧಿಕಾರಿಗಳಿಗೆ ಹಾಗೂ ವೆಚ್ಚ ವೀಕ್ಷಕರಿಗೆ ದಿನವಹಿ ವರದಿಯನ್ನು ಸಮಿತಿ ಸಲ್ಲಿಸುವುದು. ಈ ಸಮಿತಿಯು ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ನಿಗದಿತ ನಮೂನೆಗಳನ್ನು ಪಡೆದುಕೊಂಡು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಒಂದು ವೇಳೆ ಅನುಮೋದನೆ ಪಡೆಯದೇ ಜಾಹೀರಾತು ಪ್ರಸಾರವಾದಲ್ಲಿ ಸಮಿತಿಯು ಈ ಬಗ್ಗೆ ಗಮನ ಹರಿಸುವುದು ಹಾಗೂ ಅಗತ್ಯ ಕ್ರಮಕ್ಕಾಗಿ ಚುನಾವಣಾಧಿಕಾರಿಗಳಿಗೆ ಕಳುಹಿಸುವುದು. ಪತ್ರಿಕೆಗಳಲ್ಲಿ ಪ್ರಕಟವಾಗುವ ಎಲ್ಲ ಜಾಹೀರಾತುಗಳನ್ನು ಸಮಿತಿಯು ಗಮನಿಸಿ ಅಭ್ಯರ್ಥಿಗಳ ವೆಚ್ಚದ ಲೆಕ್ಕಕ್ಕೆ ಸೇರಿಸಲು ವೆಚ್ಚ ವೀಕ್ಷಕರಿಗೆ ಹಾಗೂ ಚುನಾವಣಾ ಅಧಿಕಾರಿಗಳಿಗೆ ನಿಗದಿತ ನಮೂನೆಯಲ್ಲಿ ಮಾಹಿತಿ ನೀಡುವುದು.
ಕರಪತ್ರ, ಭಿತ್ತಿಪತ್ರ ಹಾಗೂ ಈ ರೀತಿಯ ಇತರೆ ಚುನಾವಣಾ ಜಾಹೀರಾತು ಸಾಮಗ್ರಿಗಳಲ್ಲಿ ಪ್ರಕಾಶಕರ ಹಾಗೂ ಮುದ್ರಕರ ಹೆಸರು, ವಿಳಾಸ ಮುದ್ರಿಸುವುದು ಕಡ್ಡಾಯವಾಗಿದ್ದು, ಮುದ್ರಕರು ಹಾಗೂ ಪ್ರಕಾಶಕರು ಈ ಕುರಿತ ಘೋಷಣಾ ಪತ್ರವೊಂದನ್ನು ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಬೇಕೆಂದು ಸೂಚಿಸಿದ್ದಾರೆ.
ನಿಗಾ: ಅಭ್ಯರ್ಥಿಯ ಗಮನಕ್ಕೆ ತರದೆ ಬೇರೆಯವರು ಅಭ್ಯರ್ಥಿಯ ಹೆಸರಿನಲ್ಲಿ ಜಾಹೀರಾತು ಹಾಗೂ ಚುನಾವಣಾ ಸಾಮಗ್ರಿ ಮುದ್ರಿಸುವಂತಿಲ್ಲ. ಇಂಥ ಪ್ರಕರಣ ಕಂಡುಬಂದಲ್ಲಿ ಈ ರೀತಿ ಪ್ರಕಟಿಸಿದವರ ವಿರುದ್ಧವೂ ಕ್ರಮ ಜರುಗಿಸಲಾಗುತ್ತದೆ. 'ಕಾಸಿಗಾಗಿ ಸುದ್ದಿ' ಎಂದು ಪರಿಗಣಿಸಲಾಗುವ ಪ್ರಕರಣಗಳನ್ನು ಪತ್ರಿಕೆಗಳ ವಾಣಿಜ್ಯ ದರ ಮತ್ತು ವಾರ್ತಾ ಇಲಾಖೆ ಜಾಹೀರಾತು ಹೆಚ್ಚಿರುವ ದರವನ್ನು ಪರಿಗಣಿಸಿ ಅಭ್ಯರ್ಥಿಗಳ ಲೆಕ್ಕಕ್ಕೆ ಸೇರಿಸಲಾಗುತ್ತದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement