ಬಿಜೆಪಿ, ಕೆಜೆಪಿ ಕಾರ್ಯಾಲಯದ ಮೇಲೆ ದಾಳಿ, 2.78 ಲಕ್ಷ ವಶ
ಗುರುಮಠಕಲ್: ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪಿ. ರಾಜೇಂದ್ರ ಚೋಳನ್ ನೇತೃತ್ವದಲ್ಲಿ ಅಧಿಕಾರಿಗಳು ಇಲ್ಲಿಯ ಬಿಜೆಪಿ ಹಾಗೂ ಕೆಜೆಪಿ ಕಾರ್ಯಾಲಯಗಳ ಮೇಲೆ ಶುಕ್ರವಾರ ದಾಳಿ ನಡೆಸಿ, 2.78 ಲಕ್ಷ ಹಾಗೂ 2 ವಾಹನ ವಶಕ್ಕೆ ತೆಗೆದುಕೊಂಡಿದ್ದಾರೆ.
ಪಟ್ಟಣದ ಸರ್ಕಾರಿ ಅತಿಥಿಗೃಹದ ಮುಂಭಾಗದಲ್ಲಿರುವ ಬಿಜೆಪಿ ಕಾರ್ಯಾಲಯದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 2,28,500 ವಶಪಡಿಸಿಕೊಂಡಿದ್ದಾರೆ. ನಂತರ ಪಟ್ಟಣದ ರಾಮನಗರದಲ್ಲಿರುವ ಕೆಜೆಪಿ ಕಾರ್ಯಾಲಯದ ಮೇಲೆ ದಾಳಿ ನಡೆಸಿ 50 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗಿರೀಶ ಮಟ್ಟಣ್ಣವರ್ ಹಾಗೂ ಕೆಜೆಪಿಯ ಗುಂಡಪ್ಪ ಅವರ ಮೇಲೆ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ 2 ವಾಹನಗಳನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಚುನಾವಣಾಧಿಕಾರಿ ಡಾ. ಮಂಜುನಾಥ ಹಾಗೂ ಇತರ ಅಧಿಕಾರಿಗಳ ತಂಡ ಪಕ್ಷಗಳ ಕಾರ್ಯಾಲಯದ ಮೇಲೆ ದಾಳಿ ನಡೆಸಿತು.