'ಕೈ, ಕಮಲಕ್ಕೆ ಜನ ಪಾಠ ಕಲಿಸ್ತಾರೆ'
ಗುಲ್ಬರ್ಗ: ಭ್ರಷ್ಟಾಚಾರದಲ್ಲಿ ತೊಡಗಿರುವ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿಗೆ ಈ ವಿಧಾನಸಭಾ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು. ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ನಡೆದ ಜೆಡಿಎಸ್ ಅಭ್ಯರ್ಥಿಗಳ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, 20 ತಿಂಗಳ ಆಡಳಿತ ನಡೆಸಿ ಮಹತ್ವದ ಯೋಜನೆಗಳನ್ನು ಅನುಷ್ಠಾನಕ್ಕೆ ತಂದ ಜೆಡಿಎಸ್ ಪಕ್ಷದ ಪರ ಅಲೆ ಇದೆ. ಈ ಚುನಾವಣೆಯಲ್ಲಿ ಪಕ್ಷ ಏಕಪಕ್ಷೀಯವಾಗಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗುಲ್ಬರ್ಗ ಜಿಲ್ಲೆಯ ಎಲ್ಲ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳಿಗೆ ಆಶೀರ್ವದಿಸಿ ಆರಿಸಿ ತರುವ ಮೂಲಕ ಕ್ಷೇತ್ರಗಳ ಅಭಿವೃದ್ಧಿಗೆ ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದ ಅವರು, ಪಕ್ಷದಲ್ಲಿಯೇ ಇರುವುದಾಗಿ ಹೇಳಿ ಕೊನೆ ಗಳಿಗೆಯಲ್ಲಿ ನಂಬಿಕೆ ದ್ರೋಹ ಮಾಡಿದವರಿಗೆ ಮತದಾರರು ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದರು. ಸಭೆಯಲ್ಲಿ ಗುಲ್ಬರ್ಗ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಶಶೀಲ್ ನಮೋಶಿ, ಜೇವರ್ಗಿ ಕ್ಷೇತ್ರದ ಅಭ್ಯರ್ಥಿ ಕೇದಾರಲಿಂಗಯ್ಯ ಹಿರೇಮಠ ಸೇರಿದಂತೆ ಇತರ ಕ್ಷೇತ್ರಗಳ ಅಭ್ಯರ್ಥಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಯಾವುದೇ ಪಕ್ಷದೊಂದಿಗೆ ಮೈತ್ರಿ ಇಲ್ಲ
ಅಭ್ಯರ್ಥಿಗಳ ಪ್ರಚಾರ ಸಭೆಗಿಂತ ಮುಂಚೆ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ. ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ಪಕ್ಷ ಏಕಪಕ್ಷಿಯವಾಗಿ ಅಧಿಕಾರಕ್ಕೆ ಬರದಿದ್ದರೆ, ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಸಮ್ಮಿಶ್ರ ಸರ್ಕಾರ ನಡೆಸುವುದಿಲ್ಲ. ಹೊರತಾಗಿ ವಿರೋಧ ಪಕ್ಷವಾಗಿ ಕೆಲಸ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.
ರಾಜ್ಯದ 85 ರಿಂದ 90ರಷ್ಟು ಕ್ಷೇತ್ರಗಳು ಸುಲಭವಾಗಿ ಗೆಲವು ಸಾಧಿಸಲಿದೆ. ಅಧಿಕಾರಕ್ಕೆ ಬರಲು ಇನ್ನೂ 18- 20 ಕ್ಷೇತ್ರಗಳು ಗೆಲ್ಲಲು ಮೂರು ದಿನಗಳ ಕಾಲ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಶ್ರಮಿಸಲಾಗುವುದು ಎಂದರು.
ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಲಾಗುವುದು. 68 ಸಾವಿರ ಕೋಟಿ ವೆಚ್ಚದಲ್ಲಿ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲಾಗುವುದು. 75 ಸಾವಿರ ಕೋಟಿ ವೆಚ್ಚದಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಸೌಲಭ್ಯ ಕಲ್ಪಿಸಲಾಗುವುದು, ಅಪೌಷ್ಟಿಕತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಪ್ರತಿ ತಿಂಗಳ 5 ಸಾವಿರ ನೀಡಲಾಗುವುದು. ಸಾಮಾಜಿಕ ಭದ್ರತೆ ಯೋಜನೆಯಲ್ಲಿ ವೃದ್ದಾಪ್ಯ, ವಿಧವಾ ವೇತನಗಳನ್ನು 400 ರಿಂದ 1500ಗೆ ಹೆಚ್ಚಿಸುವುದು ಸೇರಿದಂತೆ ಹಲವಾರು ಜನಪರ ಯೋಜನೆಗಳನ್ನು ಅನುಷ್ಠಾನಕ್ಕೆ ತರುವುದಾಗಿ ಹೇಳಿದರು.