ಮೂಲ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಸುರಪುರ ಆ.5
ಪಟ್ಟಣದ ಅರುಂಧತಿ ಸ್ವತಂತ್ರ ಪದವಿ ಪೂರ್ವ ಕಾಲೇಜು ಕೊಠಡಿಗಳ ಕೊರತೆ ಸೇರಿದಂತೆ ಮೂಲ ಸೌಲಭ್ಯಗಳೊಂದಿಗೆ ಅವ್ಯವಸ್ಥೆಯ ಆಗರವಾಗಿದೆ ಎಂದು ಆರೋಪಿಸಿ ಎಸ್ಎಫ್ಐ ನೇತೃತ್ವದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಸೋಮವಾರ ಗಾಂಧೀ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ ಜಿಲ್ಲಾಧ್ಯಕ್ಷ ಪ್ರಕಾಶ ಆಲ್ಹಾಳ, ತಾಲೂಕಾಧ್ಯಕ್ಷ ರಾಮಯ್ಯ ಭೋವಿ ಮಾತನಾಡಿ, ಸರ್ಕಾರದಿಂದ ಅನುದಾನ ಪಡೆದ ಇಲ್ಲಿಯ ಆರುಂಧತಿ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಕಲಿಕೆಗೆ ಬೇಕಾದ ಉತ್ತಮ ವಾತಾವರಣ ಕಲ್ಪಿಸದೆ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿದೆ. ಇದು ಪಿಯುಸಿಯ ವಾಣಿಜ್ಯ, ವಿಜ್ಞಾನ ಮತ್ತು ಕಲೆ ಈ ಮೂರು ವಿಭಾಗಗಳನ್ನು ಹೊಂದಿದ್ದು ಸುಮಾರು 500 ವಿದ್ಯಾರ್ಥಿಗಳ ದಾಖಲಾತಿ ಹೊಂದಿದೆ. ಆದರೆ ವಿದ್ಯಾರ್ಥಿಗಳಿಗೆ ಕೇವಲ ಎರಡೇ ಕೋಣೆಯಲ್ಲಿ ವ್ಯಾಸಂಗ ಮಾಡುವ ದುಸ್ಥಿತಿ ಇದೆ ಎಂದು ಆರೋಪಿಸಿದರು.
ಡೊನೇಷನ್ ಪಡೆದರೂ ಸೌಲಭ್ಯವಿಲ್ಲ: ಕಾಲೇಜಿನಲ್ಲಿ ಗ್ರಂಥಾಲಯವಿದೆ, ಪುಸ್ತಕಗಳಿಲ್ಲ. ಕುಡಿವ ನೀರು ಮತ್ತು ಶೌಚಾಲಯ ವ್ಯವಸ್ಥೆ ಇಲ್ಲ. ವಿದ್ಯಾರ್ಥಿಗಳಿಂದ ಶುಲ್ಕ ರೂಪದಲ್ಲಿ ಹಾಗೂ ಸಾಕಷ್ಟು ಡೊನೇಷನ್ ಪಡೆಯುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳ ಅಭ್ಯಾಸಕ್ಕೆ ಗ್ರಂಥಾಲಯದಲ್ಲಿ ಪುಸ್ತಕಗಳೇ ಇಲ್ಲ. ಹೀಗಾಗಿ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಒಟ್ಟಾರೆಯಾಗಿ ಮಹಾವಿದ್ಯಾಲಯ ಅವ್ಯವಸ್ಥೆಯ ಆಗರವಾಗಿದೆ. ಇದು ಶಿಕ್ಷಣ ಮತ್ತು ವಿದ್ಯಾರ್ಥಿ ವಿರೋಧಿ ನೀತಿಯಾಗಿದೆ ಎಂದು ದೂರಿದರು.
ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವ್ಯಾಸಂಗದ ಕೊಠಡಿಗಳನ್ನು ಒದಗಿಸಬೇಕು. ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಪೂರಕವಾದ ಪುಸ್ತಕಗಳನ್ನು ಸಂಗ್ರಹಿಸಬೇಕು. ಶೌಚಾಲಯ, ಕುಡಿವ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು. ಪ್ರವೇಶ ಶುಲ್ಕವನ್ನು ವಿದ್ಯಾರ್ಥಿಗಳಿಗೆ ಮರಳಿ ಕೊಡಬೇಕೆಂಬ ಬೇಡಿಕೆಗಳ ಮನವಿ ಪತ್ರವನ್ನು ತಹಸೀಲ್ದಾರ್ಗೆ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಸದಸ್ಯರಾದ ಲಕ್ಷ್ಮಣ ರೆಡ್ಡಿ, ದೇವಣ್ಣ ಕಿರದಳ್ಳಿ ಸೇರಿದಂತೆ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.