ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ
ಯಾದಗಿರಿ: ಶಹಾಪುರ ತಾಲೂಕಿನ ಕ್ಯಾತನಾಳ ಗ್ರಾಮದ ರಸ್ತೆ ಹಲವು ದಿನಗಳಿಂದ ತೀವ್ರ ಹದಗೆಟ್ಟಿದ್ದು, ಸಂಚರಿಸಲು ಸಾಧ್ಯವಾಗದಂಥ ಪರಿಸ್ಥಿತಿ ನಿರ್ಮಾಣ ಮಾಡಲಾಗಿದೆ. ಇದರಿಂದ ಗ್ರಾಮಕ್ಕೆ ಸಾರಿಗೆ ಸಂಸ್ಥೆ ಬಸ್ಗಳೂ ಸ್ಥಗಿತಗೊಂಡಿದ್ದು, ಶಾಲಾ ಕಾಲೇಜಿಗೆ ಹೋಗಲು ತೀವ್ರ ಸಮಸ್ಯೆಯಾಗಿದೆ ಎಂದು ಆರೋಪಿಸಿ ಗ್ರಾಮದ ವಿದ್ಯಾರ್ಥಿಗಳು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ದುರಸ್ತಿ: ಶಹಾಪುರ ತಾಲೂಕಿನ ಖಾನಾಪುರ ಮುಖ್ಯ ರಸ್ತೆಯಿಂದ ಕೇವಲ 2 ಕಿಮೀ ಅಂತರದಲ್ಲಿ ಕ್ಯಾತನಾಳ ಗ್ರಾಮ ಬರುತ್ತದೆ. ಆದರೆ ಈ ರಸ್ತೆ ಸಂಪೂರ್ಣ ಹಾಳಾಗಿದೆ. ದುರಸ್ತಿ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಎಷ್ಟೇ ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ರಸ್ತೆ ಹದಗೆಟ್ಟ ಕಾರಣ ಗ್ರಾಮಕ್ಕೆ ಸಾರಿಗೆ ಸಂಸ್ಥೆಯ ಬಸ್ಸುಗಳು ಬರುತ್ತಿಲ್ಲ. ಇದರಿಂದ ಗ್ರಾಮಸ್ಥರಿಗೆ ಸಮಸ್ಯೆಯಾಗುತ್ತದೆ ಎಂದು ಆರೋಪಿಸಿದರು.
ತೊಂದರೆ: ಗ್ರಾಮದ ರಸ್ತೆ ದುರಸ್ತಿಗೊಳಿಸುವುದಕ್ಕೆ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಬಸ್ಸುಗಳಿಲ್ಲದೇ ಯಾದಗಿರಿ ಹಾಗೂ ಶಹಾಪುರದ ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಸರಿಯಾದ ಸಮಯಕ್ಕೆ ತರಗತಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕೂಡಲೇ ರಸ್ತೆ ದುರಸ್ತಿಗೊಳಿಸಬೇಕು. ಸಾರಿಗೆ ಸಂಸ್ಥೆ ಬಸ್ಸುಗಳನ್ನು ಗ್ರಾಮಕ್ಕೆ ಬಿಡಬೇಕು. ಇಲ್ಲದಿದ್ದರೆ ಗ್ರಾಮಸ್ಥರೊಂದಿಗೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಈ ಕುರಿತ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು.