ಬಹುಗ್ರಾಮ ಕುಡಿವ ನೀರು ಯೋಜನೆಗೆ ಆದ್ಯತೆ ನೀಡಿ
ಕ.ಪ್ರ.ವಾರ್ತೆ ಯಾದಗಿರಿ ಆ.24
ಜಿಲ್ಲೆಯ ಕುಡಿವ ನೀರಿನ ಸಮಸ್ಯೆ ನಿವಾರಿಸಲು ಬಹುಗ್ರಾಮ ಕುಡಿವ ನೀರು ಸರಬರಾಜು ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚು ಆದ್ಯತೆ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಪಂ ಸಭಾಂಗಣದಲ್ಲಿ ಶನಿವಾರ ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಜಿಲ್ಲೆಯಲ್ಲಿ ಜಲಾಶಯ ಸೇರಿದಂತೆ ವಿವಿಧ ಕಾಲುವೆಗಳು ಇರುವುದರಿಂದ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಅವಶ್ಯಕತೆ ಇದೆ. ಅದರಲ್ಲಿಯೂ ವಿವಿಧ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಅವಶ್ಯಕತೆ ಇದೆ ಎಂದರು.
ಜಿಲ್ಲೆಯ ಅರಕೇರಾದಲ್ಲಿ 9.46 ಕೋಟಿ ವೆಚ್ಚದಲ್ಲಿ 8 ಗ್ರಾಮಗಳಿಗೆ ಕುಡಿವ ನೀರು ಸರಬರಾಜು ಹಾಗೂ 15.50 ಕೋಟಿ ವೆಚ್ಚದಲ್ಲಿ 14 ಗ್ರಾಮಗಳಿಗೆ ನೀರು ಸರಬರಾಜು ಮಾಡುವ ಕಿರದಳ್ಳಿ ತಾಂಡಾದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು. ಇನ್ನಿತರ ಗ್ರಾಮಗಳಲ್ಲಿ ಇಂತಹ ಯೋಜನೆ ಜಾರಿಗೊಳಿಸಲು ಹೆಚ್ಚುವರಿ 100 ಕೋಟಿ ಅನುದಾನ ಒದಗಿಸಲು ಪ್ರಯತ್ನಿಸಲಾಗುವುದು. ಸುಮಾರು 15 ರಿಂದ 20 ಯೋಜನೆಗಳನ್ನು ಕೈಗೆತ್ತಿಕೊಳ್ಳುವ ದಿಸೆಯಲ್ಲಿ ಪರಿಶೀಲನೆ ನಡೆಸಿ ಸೆ.25ರೊಳಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.
ಕುಡಿವ ನೀರಿನ ಯೋಜನೆಗಳಿಗೆ ಸಂಬಂಧಪಟ್ಟಂತೆ ಮುಂದುವರಿದ ಕಾಮಗಾರಿಗಳನ್ನು ಡಿಸೆಂಬರ್ ಒಳಗೆ ಪೂರ್ಣಗೊಳಿಸಬೇಕು. ಹೊಸ ಕಾಮಗಾರಿಗಳ ಕ್ರಿಯಾ ಯೋಜನೆಗಳಿಗೆ ಈಗಾಗಲೇ ಅನುಮೋದನೆ ನೀಡಲಾಗಿದ್ದು, ಆದ್ಯತೆ ಮೇಲೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು. ಕುಡಿವ ನೀರಿನ ಯೋಜನೆಗಾಗಿ ಜಿಲ್ಲೆಗೆ ರಾಷ್ಟ್ರೀಯ ಗ್ರಾಮೀಣ ನೀರು ಸರಬರಾಜು ಯೋಜನೆಯಡಿ 16.16 ಕೋಟಿ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತರಾಜ್ ವಿಶೇಷ ಅನುದಾನದಡಿ ಕಾರ್ಯಪಡೆ ಕೆಲಸಕ್ಕೆ 3 ಕೋಟಿ ಹಾಗೂ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ 7.66 ಕೋಟಿ ಸೇರಿದಂತೆ ಒಟ್ಟು 26.82 ಕೋಟಿ ಅನುದಾನ ಲಭ್ಯವಿದೆ. ಇದನ್ನು ಸಮರ್ಪಕವಾಗಿ ಬಳಸಿ ಯೋಜನೆಗಳನ್ನು ಶೀಘ್ರ ಅನುಷ್ಠಾನಗೊಳಿಸಬೇಕು ಎಂದು ಸೂಚನೆ ನೀಡಿದರು.
ರಾಜ್ಯದಲ್ಲಿ ಸುಮಾರು 6 ಸಾವಿರ ಕೆರೆಗಳನ್ನು ಅಭಿವೃದ್ಧಿಗೊಳಿಸಲು ಉದ್ದೇಶಿಸಲಾಗಿದೆ. ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಎರಡು ಕೆರೆಗಳನ್ನು ಆಯ್ಕೆ ಮಾಡಬೇಕು. ಈ ಕುರಿತು ಜಲಾನಯನ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಎಂಜಿನಿಯರಿಂಗ್ ಇಲಾಖೆಯಿಂದ ಖರ್ಚು ವೆಚ್ಚ ವರದಿ ತಯಾರಿಸಬೇಕು. ಪ್ರತಿ ಗ್ರಾಮದಲ್ಲಿ ಸಮುದಾಯ ಜಾಗ ಗುರುತಿಸಿ ಬೆಳೆ ರಾಶಿಗೆ ಖಣ ನಿರ್ಮಾಣದ ಕುರಿತು ಕ್ರಮ ಕೈಗೊಳ್ಳಬೇಕು. ನಮ್ಮ ಹೊಲ ನಮ್ಮ ದಾರಿ ಯೋಜನೆಯಡಿ ರೈತರ ಹೊಲಗಳಿಗೆ ರಸ್ತೆ ನಿರ್ಮಿಸಿಕೊಡುವ ಯೋಜನೆಯಿದೆ. ಹೆಚ್ಚುವರಿ ಕ್ರಿಯಾಯೋಜನೆ ರೂಪಿಸಬೇಕು. ಕಾಯಕ ಸಂಘಗಳ ರಚನೆಗೆ ಆದ್ಯತೆ ನೀಡಿ ಗ್ರಾಪಂ ವ್ಯಾಪ್ತಿಯ ಕಾಮಗಾರಿಗಳನ್ನು ಖಾತ್ರಿ ಯೋಜನೆಯಡಿ ಕೈಗೆತ್ತಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಸುವರ್ಣ ಗ್ರಾಮೋದಯ ಯೋಜನೆಯಡಿ ಅಂಗನವಾಡಿ ಕಟ್ಟಡಗಳನ್ನು ಕಡ್ಡಾಯವಾಗಿ ನಿರ್ಮಿಸಲು ಕ್ರಮ ಕೈಗೊಳ್ಳಬೇಕು. ನಿರ್ಮಲ ಭಾರತ ಅಭಿಯಾನ ಯೋಜನೆಯಡಿ ಜಿಲ್ಲೆಯಲ್ಲಿ ನಿಗದಿಪಡಿಸಿದ ಗುರಿಯಂತೆ 25 ಸಾವಿರ ಶೌಚಾಲಯಗಳನ್ನು ನಿರ್ಮಿಸಲು ಹೆಚ್ಚಿನ ಗಮನ ನೀಡಬೇಕು. ಈ ಕುರಿತು ಅರಿವು ಮೂಡಿಸಲು ಉಸ್ತುವಾರಿ ಅಧಿಕಾರಿಯಾಗಿ ಒಬ್ಬರನ್ನು ಹಾಗೂ ಪ್ರತಿ ಹೋಬಳಿಗೆ ಒಬ್ಬರು ಜಿಲ್ಲಾಮಟ್ಟದ ಅಧಿಕಾರಿ ಮತ್ತು ಪ್ರತಿ ಗ್ರಾಪಂಗೆ ಓರ್ವ ತಾಲೂಕುಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲು ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಸಿಬ್ಬಂದಿ ಕೊರತೆಗೆ ಸಂಬಂಧಪಟ್ಟಂತೆ ಆಯಾ ಇಲಾಖೆ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರಲಾಗುವುದು ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿನ ಸಣ್ಣ ನೀರು ಸರಬರಾಜು ಯೋಜನೆ ಮತ್ತು ಕೊಳವೆ ಬಾವಿಗಳಿಗೆ ಸಂಬಂಧಪಟ್ಟಂತೆ ಜಿಲ್ಲಾಧಿಕಾರಿ ಮೂಲಕ ಅನುಮೋದನೆ ಪಡೆಯಬೇಕೆಂದು ಹೇಳಿದರು.
ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ್ ಅವರು ಮಾತನಾಡಿ, ಪ್ರತಿ ವರ್ಷ ಟ್ಯಾಂಕರ್ ಮೂಲಕ ನೀರು ಸರಬರಾಜು ಆಗುವ ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ರೂಪಿಸಲು, ಆಮ್ ಆದ್ಮಿ ವಿಮಾ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವುದರ ಜತೆಗೆ ಅತಿ ಕಡಿಮೆ ಮಳೆಯಾದ ಗ್ರಾಮಗಳ ಬಗ್ಗೆ ಸೂಕ್ತ ಮಾಹಿತಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಪಂ ಸಿಇಒ ಎಸ್.ಎ.ಜಿಲಾನಿ ಇದ್ದರು. ಪ್ರಧಾನ ಕಾರ್ಯದರ್ಶಿ ವಿಜಯಭಾಸ್ಕರ್ ಅವರು ನಂತರ ಮುಂಡರಗಿ, ರಾಮಸಮುದ್ರ, ಗುಂಜನೂರ, ಚಿನ್ನಾಕಾರ, ಅನಪುರ ಗ್ರಾಮಗಳಿಗೆ ಭೇಟಿ ನೀಡಿ ಉದ್ಯೋಗ ಖಾತ್ರಿ ಯೋಜನೆ, ನೀರು ಸರಬರಾಜು ಯೋಜನೆ, ನಿರ್ಮಲ ಭಾರತ ಅಭಿಯಾನ ಯೋಜನೆ ಹಾಗೂ ಇತರೆ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.