ಗ್ರಾಮೀಣ ಜನರಿಗೆ ಆರೋಗ್ಯ ಸೇವೆ ಒದಗಿಸಲು ಸೂಚನೆ
ಕ.ಪ್ರ.ವಾರ್ತೆ, ಗುಲ್ಬರ್ಗ, ಆ.26
ಜಿಲ್ಲೆಯ ಗಡಿಭಾಗದಲ್ಲಿ ಹಾಗೂ ಗುಡ್ಡಗಾಡುಗಳಲ್ಲಿ ವಾಸಿಸುತ್ತಿರುವ ಅತ್ಯಂತ ಕಡುಬಡವ ಮತ್ತು ತಾಂಡಾದ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಬೇಕೆಂದು ಪೌರಾಡಳಿತ, ಸಾರ್ವಜನಿಕ ಉದ್ದಿಮೆಗಳು, ಅಲ್ಪಸಂಖ್ಯಾತರ ಕಲ್ಯಾಣ, ವಕ್ಫ್ ಮತ್ತು ಹಜ್ ಹಾಗೂ ಗುಲ್ಬರ್ಗ ಜಿಲ್ಲಾ ಉಸ್ತುವಾರಿ ಸಚಿವ ಖಮರುಲ್ ಇಸ್ಲಾಂ ಅವರು ವೈದ್ಯಾಧಿಕಾರಿಗೆ ಸೂಚಿಸಿದರು.
ಜಿಲ್ಲಾ ಆರೋಗ್ಯ ಅಭಿಯಾನದ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ಭಾಗಗಳಲ್ಲಿ ಶಿಶು ಮತ್ತು ತಾಯಿ ಮರಣವನ್ನು ತಪ್ಪಿಸುವ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ನೀಡುವುದು ಅವಶ್ಯಕವಾಗಿದೆ ಎಂದರು.
ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ: ಗ್ರಾಮೀಣ ಪ್ರದೇಶದ ಗರ್ಭಿಣಿಯರನ್ನು ಗುರುತಿಸಿ ಅವರಿಗೆ ಸಮಯಕ್ಕನುಸಾರ ಸಮರ್ಪಕ ಆರೋಗ್ಯ ಸೇವೆಯನ್ನು ಒದಗಿಸಿ ಆಸ್ಪತ್ರೆಯಲ್ಲಿ ಹೆರಿಗೆಯಾಗುವ ಹಾಗೆ ನೋಡಿಕೊಳ್ಳಬೇಕು. ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ಅನುಷ್ಠಾನದಲ್ಲಿ ಜಿಲ್ಲೆಯು 15ನೇ ಸ್ಥಾನದಲ್ಲಿದ್ದು, ಮುಂದಿನ ವರ್ಷಕ್ಕೆ 7- 8ನೇ ಸ್ಥಾನಕ್ಕೆ ಬರುವ ಹಾಗೆ ಕಾರ್ಯಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಬೇಕೆಂದರು.
ಅಭಿಯಾನದ ಪ್ರಮುಖ ಗುರಿ: ಗ್ರಾಮೀಣ ಜನತೆಗೆ ಕೈಗೆಟುಕುವಂತೆ ಗುಣಾತ್ಮಕ ಆರೋಗ್ಯ ಸೇವೆ, ಶಿಶು ಮತ್ತು ತಾಯಂದಿರ ಮರಣ ಪ್ರಮಾಣ ಕಡಿಮೆಗೊಳಿಸುವುದು, ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವುದು ಹಾಗೂ ಜನಸಂಖ್ಯಾ ಸ್ಥಿರತೆಯನ್ನು ಸಾಧಿಸುವುದು ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನದ ಪ್ರಮುಖ ಗುರಿಗಳಾಗಿವೆ ಎಂದರು.
ಹೆರಿಗೆ ನಂತರ ತಾಯಿ- ಮಗು ಆರೋಗ್ಯವಂತರಾಗಿರಲು ಮಡಿಲು ಕಾರ್ಯಕ್ರಮ, ಹೆರಿಗೆಯು ಜಟಿಲವಾಗಿದ್ದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಹೆರಿಗೆ ಮಾಡಿಸಿಕೊಳ್ಳಲು ತಾಯಿಯ ಭಾಗ್ಯಯೋಜನೆ, ಜನನಿ ಸುರಕ್ಷಾ ಕಾರ್ಯಕ್ರಮ, ಸುವರ್ಣ ಆರೋಗ್ಯ ಚೈತನ್ಯ ಕಾರ್ಯಕ್ರಮ ಹಾಗೂ ಕಬ್ಬಿಣಾಂಶದ ಮಾತ್ರೆ ವಿತರಿಸುವ ಕಾರ್ಯಕ್ರಮದ ಜೊತೆಗೆ ಆರೋಗ್ಯ ಸೇವೆ ನೀಡಲು ಸಂಚಾರಿ ಆರೋಗ್ಯ ಘಟಕಗಳನ್ನು ಕಾರ್ಯಗತಗೊಳಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಿವರಾಜ ಸಜ್ಜನಶೆಟ್ಟಿ ಸಭೆಗೆ ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಪ್ರಸನ್ನಕುಮಾರ್, ಜಿಪಂ ಸಿಇಒ ಅಧಿಕಾರಿ ಪಲ್ಲವಿ ಆಕುರಾತಿ, ಜಿಲ್ಲಾಮಟ್ಟದ ಆರೋಗ್ಯ ಅಧಿಕಾರಿಗಳು ಇತರರು ಸಭೆಯಲ್ಲಿ ಉಪಸ್ಥಿರಿದ್ದರು.