ಕಾಮಗಾರಿ ಸಮರೋಪಾದಿಯಲ್ಲಿ ನಡೆಯಲಿ
ಕನ್ನಡಪ್ರಭ ವಾರ್ತೆ ಯಾದಗಿರಿ ಆ.27
ಜಿಲ್ಲಾ ಉಸ್ತುವಾರಿ ಸಚಿವ ಬಾಬೂರಾವ ಚಿಂಚನಸೂರ ಅವರು ಮಂಗಳವಾರ ನಗರದಲ್ಲಿ ನಿರ್ಮಾಣವಾಗುತ್ತಿರುವ ಜಿಲ್ಲಾ ಸಂಕೀರ್ಣ, ಜಿಲ್ಲಾ ಕ್ರೀಡಾಂಗಣ ಹಾಗೂ ಕೆರೆಗೆ ಅಭಿವೃದ್ಧಿ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಈ ಎಲ್ಲ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು. ಈ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಅವಶ್ಯವಿರುವ ಅನುದಾನವನ್ನು ಒದಗಿಸಿಕೊಡಲಾಗುವುದು. ಅಧಿಕಾರಿಗಳು ಕಾಮಗಾರಿಗಳನ್ನು ಗುಣಮಟ್ಟದಲ್ಲಿ ಕೈಗೆತ್ತಿಕೊಳ್ಳುವಂತೆ ಸೂಚಿಸಿದರು.
ಜನರ ನಿರೀಕ್ಷೆ ಬೆಟ್ಟದಷ್ಟು..: ಎಲ್ಲ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಪಟ್ಟ ಅಧಿಕಾರಿಗಳ ಹಾಗೂ ಶಾಸಕರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಕಾಮಗಾರಿ ವಿಳಂಬವಾಗಬಾರದು ಎಂದು ಹೇಳಿದರು.
46 ಕಚೇರಿಗಳಿಗೆ ಕಚೇರಿ: ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ್ ಮಾತನಾಡಿ, 2014ರ ನವೆಂಬರ್ ವೇಳೆಗೆ ಜಿಲ್ಲಾ ಸಂಕೀರ್ಣದ ಕೆಳಮಹಡಿ ಹಾಗೂ 2015ರ ಜನವರಿ ತಿಂಗಳಲ್ಲಿ ಎರಡನೇ ಮತ್ತು ಮೂರನೇ ಅಂತಸ್ತು ನಿರ್ಮಿಸುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಒಟ್ಟು 56 ಎಕರೆ ಜಮೀನು ಲಭ್ಯವಿದೆ. ಜಿಲ್ಲಾ ಸಂಕೀರ್ಣ ನಿರ್ಮಾಣದಿಂದ ಒಟ್ಟು 46 ಇಲಾಖೆಗಳಿಗೆ ಇಲ್ಲಿ ಕಚೇರಿ ಲಭ್ಯವಾಗಲಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಶೀಘ್ರಗತಿಯಲ್ಲಿ ಕಾಮಗಾರಿ ಕೈಗೊಳ್ಳಲು ಸೂಚಿಸಿದ್ದು, ಅನುದಾನ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಕೆರೆ ಅಭಿವೃದ್ಧಿ ಸಂಬಂಧಿಸಿದಂತೆ ನಿರ್ಮಿತಿ ಕೇಂದ್ರದಿಂದ ವಿಳಂಬವಾಗುತ್ತಿರುವ ಹಿನ್ನೆಲೆ ಭೂ ಸೇನಾ ನಿಗಮದಿಂದ ಈ ಕಾರ್ಯ ಹಮ್ಮಿಕೊಳ್ಳುವ ಕುರಿತು ಪರಿಶೀಲಿಸಲಾಗುವುದೆಂದು ಅವರು ತಿಳಿಸಿದರು.