ಅಂಗನವಾಡಿ ಕೇಂದ್ರಗಳಿಗೆ ಮೂಲ ಸೌಲಭ್ಯ ಕಲ್ಪಿಸಿ
ಯಾದಗಿರಿ: ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಕಡ್ಡಾಯವಾಗಿ ಕುಡಿವ ನೀರಿನ, ವಿದ್ಯುತ್, ಶೌಚಾಲಯ ಸೌಲಭ್ಯ ಕಲ್ಪಿಸಬೇಕೆಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎ. ಜಿಲಾನಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಪಂ ಸಭಾಂಗಣದಲ್ಲಿ ಶುಕ್ರವಾರ ಜಿಪಂ ಅಧ್ಯಕ್ಷೆ ಭೀಮಮ್ಮ ಚಪೆಟ್ಲಾ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ನೂತನ ಮಾರ್ಗದರ್ಶಿ ಅನ್ವಯ ಅಂಗನವಾಡಿ ಕೇಂದ್ರಗಳಿಗೆ ಕಡ್ಡಾಯವಾಗಿ ಕುಡಿಯುವ ನೀರು, ವಿದ್ಯುತ್ ಮತ್ತು ಶೌಚಾಲಯಗಳ ಸೌಲಭ್ಯಗಳನ್ನು ಕಲ್ಪಿಸಬೇಕು. ಅದರಂತೆ ನೂತನ ಕಟ್ಟಡ ನಿರ್ಮಾಣ ಮಾಡುವ ಮುಂಚೆ ನಿವೇಶನಗಳಿಗೆ ಸಂಬಂಧಪಟ್ಟಂತೆ ಯಾವುದೇ ರೀತಿಯ ಅಡೆತಡೆ ಇರದಂತೆ ಎಚ್ಚರ ವಹಿಸುವಂತೆ ಸಲಹೆ ನೀಡಿದರು.
ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಬೇಕಾಗುವ ಸೌಲಭ್ಯಗಳ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಭೇಟಿ ನೀಡಿ ಪರಿಶೀಲಿಸಬೇಕು. ದುರಸ್ತಿಗೊಳಿಸುವ ಅಂಗನವಾಡಿ ಕಟ್ಟಡಗಳ ಮರು ದುರಸ್ತಿ ಮುಂದಿನ 10 ವರ್ಷಗಳ ಅವಧಿವರೆಗೆ ಬರದಂತೆ ಎಚ್ಚರ ವಹಿಸಿ ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಅವರು ಸೂಚಿಸಿದರು.
ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರು ಸೌಲಭ್ಯ ಕಲ್ಪಿಸುವ ಬಾಕಿ ಉಳಿದಿರುವ ಆರ್ಒ ಪ್ಲಾಂಟ್ಗಳಿಗೆ ತಕ್ಷಣ ವಿದ್ಯುತ್ ಸೌಲಭ್ಯ ಕಲ್ಪಿಸಿ ಕುಡಿಯುವ ನೀರಿನ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು. ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ರಸ್ತೆ ಗುಂಡಿ ತುಂಬುವ ಕಾರ್ಯ ಮಾಡಬೇಕು. ತಾಳೆ ಬೆಳೆ ಕ್ಷೇತ್ರ ಅಧ್ಯಯನಕ್ಕೆ ರೈತರ ಕ್ಷೇತ್ರ ಪ್ರವಾಸ ಮಾಡಬೇಕು. ಕುರಿದೊಡ್ಡಿ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ದೊರೆಯುವಂತೆ ನೋಡಿಕೊಳ್ಳಬೇಕು. ರೈತರಿಗೆ ಗುಣಮಟ್ಟದ ರಸಗೊಬ್ಬರ ದೊರೆಯುವಂತೆ ನೋಡಿಕೊಳ್ಳಬೇಕು. ನಿರ್ಮಾಣ ಹಂತದಲ್ಲಿರುವ ಶಾಲಾ ಕಟ್ಟಡಗಳ ಕಾಮಗಾರಿ ಗುಣಮಟ್ಟ ಇರುವಂತೆ ಮೋಡಿಕೊಳ್ಳಬೇಕೆಂದು ಅವರು ಸಂಬಂಧಪಟ್ಟ ಅಧಿಕಾಲ್ಲಾ ರಿಗಳಿಗೆ ಸೂಚಿಸಿದರು.
ಜಿಪಂ ಅಧ್ಯಕ್ಷೆ ಭೀಮಮ್ಮ ಚಪೆಟ್ಲಾ ಅವರು ಬಿ.ಎನ. ತಾಂಡಾಕ್ಕೆ ಕುಡಿಯುವ ನೀರಿನ ಸೌಲಭ್ಯ, ಕಾಕಲವಾರ ಗ್ರಾಮಕ್ಕೆ ರಸ್ತೆ ಸೌಲಭ್ಯ, ಜಿಲ್ಲೆಯ ವಿವಿಧ ಆಸ್ಪತ್ರೆಗಳಿಗೆ ವೈದ್ಯರ ಸೌಲಭ್ಯ ಹಾಗೂ ರೈತರಿಗೆ ಬೆಳೆ ವಿಮೆ ಸೌಲಭ್ಯ ದೊರಕಿಸಿ ಕೊಡುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.
ಸಭೆಯಲ್ಲಿ ಕರ್ನಾಟಕ ಗ್ರಾಮಿಣ ಮೂಲಭೂತ ಸೌಲಭ್ಯ ಅಧಿಕಾರಿಗಳು, ಸುವರ್ಣ ಗ್ರಾಮೋದಯ ಯೋಜನೆಯಡಿ ನಾಲ್ಕು ಹಂತದಲ್ಲಿ ಕೈಗೊಂಡು ಕಾಮಗಾರಿಗಳ ಬಗ್ಗೆ ಮತ್ತು 5ನೇ ಹಂತದ ಕಾಮಗಾರಿ ಕೈಗೊಳ್ಳಲು ಖರ್ಚು-ವೆಚ್ಚ ವರದಿ ತಯಾರಿಸಲಾಗುತ್ತಿದೆ. ನಂಜುಂಡಪ್ಪ ವರದಿ ಅನ್ವಯ ಕೈಗೊಳ್ಳಲಾಗುತ್ತಿರುವ ಶಾಲಾ ಕಟ್ಟಡ ಕಾಮಗಾರಿ ಬಗ್ಗೆ ವಿವರಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಾಮಾಜಿಕ ಅರಣ್ಯ, ಸಮಾಜ ಕಲ್ಯಾಣ ಇಲಾಖೆ, ಜಲಾನಯನ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಸಭೆಯಲ್ಲಿ ಜಿಪಂ ಉಪಾಧ್ಯಕ್ಷ ಚನ್ನಬಸಮ್ಮ ಸೋಮಣ್ಣನವರ, ಬಸವರಾಜ ಖಂಡ್ರೆ, ಬಸವರಾಜ, ಬಸಲಿಂಗಮ್ಮ ಮೇಟಿ ಇದ್ದರು