ಸತ್ಯಾಗ್ರಹ ತಾತ್ಕಾಲಿಕ ಮುಂದೂಡಿಕೆ
ಸುರಪುರ: ಪೇಠ ಅಮ್ಮಾಪುರ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಗಾಂಧೀಜಿ ವೃತ್ತದಲ್ಲಿ ಹಮ್ಮಿಕೊಂಡಿದ್ದ ಉಪವಾಸ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಶಾಸಕ ರಾಜಾ ವೆಂಕಟಪ್ಪನಾಯಕ ತಿಳಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ ಅವರ ವಿನಂತಿ ಮೇರೆಗೆ ಸತ್ಯಾಗ್ರಹ ಕೈಬಿಡಲಾಗಿದೆ. ಡಿವೈಎಸ್ಪಿ ಎಸ್.ಡಿ. ಕಟ್ಟಿಮನಿ ಅವರು ತಮ್ಮನ್ನು ಭೇಟಿ ಮಾಡಿ ಸತ್ಯಾಗ್ರಹ ಮಾಡದಂತೆ ಕೋರಿದ್ದರು. ಪೇಠ ಅಮ್ಮಾಪುರ ಘಟನೆ ಕುರಿತು ವಿಚಾರಣೆ ಮಾಡಿ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಒಂದು ವೇಳೆ ನಿಗದಿತ ಅವಧಿಯಲ್ಲಿ ವಿಚಾರಣೆ ಮಾಡಿ ಕ್ರಮ ತೆಗೆದುಕೊಳ್ಳದಿದ್ದರೆ ಮತ್ತೆ ನಾನು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ ಶಾಸಕ ಆರ್ವಿಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.