ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

'ಕೇಂದ್ರೀಯ ವಿವಿಗೆ ನೀರು ಪೂರೈಕೆಗಾಗಿ ಸಮಿತಿ'

Lingaraj Badiger
Updated On : 31 Dec 2013, 11:12 am

ಕ.ಪ್ರ. ವಾರ್ತೆ, ಗುಲ್ಬರ್ಗ, ಡಿ.30
ಆಳಂದ ತಾಲೂಕಿನ ಕಡಗಂಚಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಶಾಶ್ವತ ನೀರು ಪೂರೈಕೆಗೆ ತಜ್ಞರನ್ನೊಳಗೊಂಡ ಸಮಿತಿಯೊಂದನ್ನು ರಚಿಸಿ ನೀರು ಲಭ್ಯತೆ ಬಗ್ಗೆ ಸಮೀಕ್ಷೆ ಕೈಗೊಂಡು ಕುಡಿಯುವ ನೀರಿನ ತೊಂದರೆಯನ್ನು ನಿವಾರಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಖಮರುಲ್ ಇಸ್ಲಾಂ ಅವರು ತಿಳಿಸಿದರು.
ನೀರು ಪೂರೈಸಿ: ಸೋಮವಾರ ಗುಲ್ಬರ್ಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಅಮರ್ಜಾ ನದಿಯಿಂದ ನೀರು ಪ್ಯೂರೈಸಲಾಗುತ್ತಿದೆ. ಆದರೆ ಬೇಸಿಗೆಯಲ್ಲಿ ನೀರು ಪೂರೈಕೆಯಲ್ಲಿ ತೊಂದರೆಯಾಗುವುದು. ಸುಮಾರು 1500 ವಿದ್ಯಾರ್ಥಿಗಳು ಅಧ್ಯಯನ ಕೈಗೊಳ್ಳುವ ಅಂತಾರಾಷ್ಟ್ರೀಯ ಮಟ್ಟದ ಈ ವಿಶ್ವವಿದ್ಯಾಲಯಕ್ಕೆ ಕುಡಿಯುವ ನೀರು ಪೂರೈಕೆ ಮಾಡುವುದು ಅತಿ ಅವಶ್ಯಕವಾಗಿದ್ದು, ಅಫಜಲ್ಪುರ ಮತ್ತು ಆಳಂದ ಕ್ಷೇತ್ರದ ಶಾಸಕರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿರುವ ಎಲ್ಲ ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ಸಂಪರ್ಕವನ್ನು ಕೂಡಲೇ ಕಲ್ಪಿಸುವಂತೆ ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಗಂಗಾ ಕಲ್ಯಾಣ ಯೋಜನೆಯಲ್ಲಿ ಕೊರೆದ ಸುಮಾರು 1200ಬೋರ್‌ವೆಲ್‌ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕಾಗಿದ್ದು, ಅದನ್ನು ಮಾರ್ಚ್ 2014ರೊಳಗಾಗಿ ಪೂರ್ಣಗೊಳಿಸಬೇಕು ಎಂದರು.
ಸೂಕ್ತ ಕ್ರಮ: ಜಿಲ್ಲೆಯಾದ್ಯಂತ ಜೆಸ್ಕಾಂ ಉಪವಿಭಾಗಗಳಲ್ಲಿ ಕನಿಷ್ಠ 9 ಟ್ರಾನ್ಸ್‌ಫಾರ್ಮರ್‌ಗಳ ಹಾಗೂ ವಿಭಾಗದಲ್ಲಿ ಕನಿಷ್ಠ 25 ಟ್ರಾನ್ಸ್‌ಫಾರ್ಮರ್‌ಗಳ ಬ್ಯಾಂಕ್ ಸ್ಥಾಪಿಸುವಂತೆ ತಿಳಿಸಿದ ಸಚಿವರು, ಟ್ರಾನ್ಸ್‌ಫಾರ್ಮರ್ ದುರಸ್ತಿಗಾಗಿ ಸೂಕ್ತ ಕ್ರಮ ಜರುಗಿಸುವಂತೆ ತಿಳಿಸಿದರು.
ಈ ಹಿಂದಿನ ಸಚಿವ ಸಂಪುಟ ಸಭೆಗಳಲ್ಲಿ ಮಂಜೂರಾಗಿರುವ ರಸ್ತೆ ಕಾಮಗಾರಿಗಳು ಸ್ಥಗಿತಗೊಂಡಿರುವ ಬಗ್ಗೆ ಮಾಹಿತಿ ಪಡೆಯಲಾಗಿದ್ದು, 2009ರಿಂದ ಇಲ್ಲಿಯವರೆಗೆ ಸ್ಥಗಿತಗೊಂಡ ರಸ್ತೆ ಕಾಮಗಾರಿಗಳ ಬಗ್ಗೆ ವಿವರವನ್ನು ಸಂಗ್ರಹಿಸಿ ಯೋಜನೆ ರೂಪಿಸಿ, ಕೂಡಲೇ ಸಲ್ಲಿಸಿದಲ್ಲಿ ಆಯಾ ಇಲಾಖೆಗಳ ಸಚಿವರಿಗೆ ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.
ಕಾಮಗಾರಿ ಪೂರ್ಣಗೊಳಿಸಿ: ನಮ್ಮ ಗ್ರಾಮ-ನಮ್ಮ ರಸ್ತೆ ಯೋಜನೆಯಡಿ ಜಿಲ್ಲೆಯಲ್ಲಿ ಕೈಗೊಂಡಿರುವ 245.69 ಕಿ.ಮೀ. ರಸ್ತೆ ಕಾಮಗಾರಿಯನ್ನು ಮಾರ್ಚ್ ಅಂತ್ಯದೊಳಗಾಗಿ ಪೂರ್ಣಗೊಳಿಸಬೇಕು ಎಂದು ಸಚಿವರು ತಿಳಿಸಿದರು. ಬೆಣ್ಣೆತೋರಾ ಮತ್ತು ಲೋವರ್ ಮುಲ್ಲಾಮಾರಿ ನೀರಾವರಿ ಯೋಜನೆಗಳನ್ನು ಸಂಪೂರ್ಣವಾಗಿ ಪುನರ್ ರಚಿಸುವ ಉದ್ದೇಶ ಹೊಂದಲಾಗಿದ್ದು, ಇದಕ್ಕಾಗಿ ಸಂಪೂರ್ಣ ಯೋಜನಾ ವರದಿ ಸಿದ್ಧಪಡಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement