ಹಾಸ್ಟೆಲ್ ಸುಧಾರಣೆಗೆ ಆಗ್ರಹಿಸಿ ಪ್ರತಿಭಟನೆ
ಯಾದಗಿರಿ: ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ವಸತಿ ನಿಲಯಗಳ ಅವ್ಯವಸ್ಥೆ ಸುಧಾರಣೆಗೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ವಸತಿ ನಿಲಯದ ಪ್ರದೇಶ ಬಯಸುವ ವಿದ್ಯಾರ್ಥಿಗಳ ಪೈಕಿ ಶೇ. 80ರಷ್ಟು ವಿದ್ಯಾರ್ಥಿಗಳು ಹಾಸ್ಟೆಲ್ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಶೇ. 55ರಷ್ಟು ವಸತಿ ನಿಲಯಗಳಿಗೆ ಮಾತ್ರ ಸ್ವಂತ ಕಟ್ಟಡವಿದೆ. ಉಳಿದ ಹಾಸ್ಟೆಲ್‌ಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದ್ದು, ಪ್ರತಿ ವರ್ಷ ಬಾಡಿಗೆ ರೂಪದಲ್ಲಿ ಕೋಟ್ಯಂತರ ಹಣ ಖಾಸಗಿ ವ್ಯಕ್ತಿಗಳಿಗೆ ಆರ್ಥಿಕವಾಗಿ ನೆರವಾಗುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಸ್ವಂತ ಕಟ್ಟಡವಿದ್ದರೂ ಕೊಠಡಿ ಸಮಸ್ಯೆಯಿದೆ. ಆದ್ದರಿಂದ ಸರ್ಕಾರ ಹೆಚ್ಚುವರಿ ಕೋಣೆ ನಿರ್ಮಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯದ ಎಲ್ಲ ಹಾಸ್ಟೆಲ್‌ಗಳಲ್ಲಿ ಬಯೋವುಟ್ರಿಕ್ ವ್ಯವಸ್ಥೆ ಜಾರಿಗೊಳಿಸಬೇಕು. ವಿದ್ಯಾರ್ಥಿ ವೇತನ ಹೆಚ್ಚಿಸಬೇಕು. ಪ್ರತಿ ತಿಂಗಳೂ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಬೇಕು. ಪೋಷಕರ ವೇದಿಕೆ ರಚಿಸಬೇಕು ಎಂಬಿತ್ಯಾದಿ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು. ಶರಣಗೌಡ ಪಾಟೀಲ, ವೀರಭದ್ರ ಕಿರದಳ್ಳಿ, ಸಾಬಣ್ಣ ಬಸವರಾಜ, ಚಂದ್ರೇಶಖರ ಅವಿನಾಶ್ ಇದ್ದರು.