16ರಂದು ಮಕ್ಕಳ ಸಾಹಿತ್ಯ ಸಮ್ಮೇಳನ
ಯಾದಗಿರಿ: ಜಿಲ್ಲಾ ಮಟ್ಟದ 2ನೇ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಫೆ. 16ರಂದು ನಗರದ ಸರ್ಕಾರಿ ಪಿಯು ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಸಮ್ಮೇಳನದ ಅಧ್ಯಕ್ಷೆಯಾಗಿ ವಿದ್ಯಾರ್ಥಿನಿ ಬಾಂಧವ್ಯಾ ಶರ್ವಕುಮಾರ ಆವುಂಟಿ ಆಯ್ಕೆಯಾಗಿದ್ದಾಳೆ ಎಂದು ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಬಸವರಾಜ ಅರಳಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗುರುಮಠಕಲ್ ಪ್ರಯೋಗ ಪ್ರತಿಷ್ಠಾನವು ಮಕ್ಕಳಿಗಾಗಿ ಈ ಸಮ್ಮೇಳವನ್ನು ಏರ್ಪಡಿಸಿ, ಮಕ್ಕಳಿಂದಲೇ ಎಲ್ಲಾ ಕಾರ್ಯಕ್ರಮ ನಡೆಸುತ್ತಿದೆ. ಕಳೆದ ವರ್ಷ ಗುರುಮಠಕಲ್ ಪಟ್ಟಣದಲ್ಲಿ ಪ್ರಥಮ ಸಮ್ಮೇಳನ ಹಮ್ಮಿಕೊಳ್ಳಲಾಗಿತ್ತು. ಎರಡನೇ ಸಮ್ಮೇಳನವನ್ನು ಜಿಲ್ಲಾ ಕೇಂದ್ರ ಯಾದಗಿರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.
ಕನ್ನಡದ ಕೋಟ್ಯಧಿಪತಿ ವಿಜೇತ ಜೇವರ್ಗಿ ತಾಲೂಕಿನ ತೆಂಗಳಿ ಗ್ರಾಮದ ಮಲ್ಲಿಕಾರ್ಜುನ ಸಮ್ಮೇಳನ ಉದ್ಘಾಟಿಸಲಿದ್ದು, ಗುರುಮಠಕಲ್ ಖಾಸಾಮಠದ ಶಾಂತವೀರ ಮುರುಘರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.
ಸಮ್ಮೇಳನದ ಸರ್ವಾಧ್ಯಕ್ಷೆ ಬಾಂಧವ್ಯಾ ಅಧ್ಯಕ್ಷೀಯ ಭಾಷಣ ಮಾಡಲಿದ್ದು, ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ, ಜಿಪಂ, ತಾಪಂ ಮತ್ತು ನಗರಸಭೆಯ ಅಧ್ಯಕ್ಷರು ಸೇರಿದಂತೆ ಇತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಗೋಷ್ಠಿಗಳು: ಸಮ್ಮೇಳದಲ್ಲಿ ಶಿಕ್ಷಣದಲ್ಲಿ ಜ್ಞಾನ ಮುಖ್ಯವೂ-ಅಂಕಗಳು ಮುಖ್ಯವೋ, ಆರ್‌ಟಿಐ ಕಾಯ್ದೆ, 371(ಜೆ) ತಿದ್ದುಪಡಿಯಿಂದ ಅಭಿವೃದ್ಧಿಯ ಕಲ್ಪನೆ, ಶಿಕ್ಷಣದಲ್ಲಿ ಮಕ್ಕಳ ಸಾಹಿತ್ಯದ ಅಗತ್ಯ ಎಂಬ ವಿಷಯಗಳ ಕುರಿತು ಗೋಷ್ಠಿಗಳು ನಡೆಯಲಿವೆ ಮತ್ತು ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ. ಅಂದು ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಬಸನಗೌಡ ಬಿರಾದಾರ ನಿರ್ಣಯ ಮಂಡನೆ ಮಾಡಲಿದ್ದಾರೆ. ಪ್ರಯೋಗ ಪ್ರತಿಷ್ಠಾನದ ಅಧ್ಯಕ್ಷ ಪ್ರಭಾಕರ ಜೋಶಿ ಅಧ್ಯಕ್ಷತೆ ವಹಿಸಲಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮ: ಹಾಸ್ಯ ಕಲಾವಿದ ಬಸವರಾಜ ಮಹಾಮನಿ ನೇತೃತ್ವದಲ್ಲಿ ಸಂಜೆ 6-30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ.
ಅಂದು ಬೆಳಗ್ಗೆ ಮೈಲಾಪುರ ಅಗಸಿಯಿಂದ ಸಮ್ಮೇಳನದ ಅಧ್ಯಕ್ಷರ ಮೆರವಣಿಗೆ ನಡೆಯಲಿದ್ದು, ಪ್ರತಿಭಾ ಕಾರಂಜಿಯ ಧಾರ್ಮಿಕ ಪಠಣದಲ್ಲಿ ರಾಜ್ಯಕೆ ಪ್ರಥಮ ಸ್ಥಾನಗಳಿಸಿದ ವಿದ್ಯಾರ್ಥಿ ಶೇಖ ದಾವೂದ ಚಾಲನೆ ನೀಡಲಿದ್ದಾರೆ. ಗೌರವಾಧ್ಯಕ್ಷ ಹಾಗೂ ಶಾಸಕ ಡಾ.ಎ.ಬಿ.ಮಾಲಕರೆಡ್ಡಿ ಉಪಸ್ಥಿತರಿರುವರು ಎಂದು ತಿಳಿಸಿದರು.
ಬಸವರಾಜ ಆಲೆಮನಿ ಮಾತನಾಡಿ, ಈ ಸಮ್ಮೇಳನದಲ್ಲಿ ಜಿಲ್ಲೆಯ 3 ಸಾವಿರಕ್ಕೂ ಹೆಚ್ಚು ಮಕ್ಕಳು ಭಾಗವಹಿಸಲಿದ್ದು, ಎಲ್ಲರಿಗೂ ಊಟೋಪಹಾರದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ವಿಶೇಷವಾಗಿ ಮಕ್ಕಳಿಂದಲೇ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಮಕ್ಕಳಲ್ಲಿ ಸಾಹಿತ್ಯದ ಆಸಕ್ತಿ ಹಟ್ಟಿಸುವ ಕೆಲಸ ಪ್ರತಿಷ್ಠಾನದ ಉದ್ದೇಶವಾಗಿದೆ. ಈ ವಿಶಿಷ್ಟ ಕಾರ್ಯಕ್ರಮದಲ್ಲಿ ಎಲ್ಲರೂ ಪಾಲ್ಗೊಂಡು ಯಶಸ್ಸುಗೊಳಿಸಬೇಕು ಎಂದು ಮನವಿ ಮಾಡಿದರು. ಜ್ಞಾನೇಶ್ವರ ಸಂದೇನಕರ್, ಮಲ್ಲಿಕಾರ್ಜುನ ಬಿಳಾರ ಇದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.