ಇಂದು ಪತ್ರಿಕಾ ದಿನಾಚರಣೆ
ಯಾದಗಿರಿ: ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಜು.11ರಂದು ಬೆಳಗ್ಗೆ 11 ಗಂಟೆಗೆ ಪತ್ರಿಕಾ ದಿನಾಚರಣೆ ಹಾಗೂ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಬಾಬುರಾವ ಚಿಂಚನಸೂರ ಕಾರ್ಯಕ್ರಮ ಉದ್ಘಾಟಿಸುವರು.
ಸಂಘದ ಅಧ್ಯಕ್ಷ ಸಂಜೀವರಾವ ಕುಲಕರ್ಣಿ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಶಾಸಕರಾದ ಡಾ.ಎ.ಬಿ. ಮಾಲಕರಡ್ಡಿ, ರಾಜಾ ವೆಂಕಟಪ್ಪ ನಾಯಕ, ಗುರುಪಾಟೀಲ್ ಶಿರವಾಳ, ಜಿಲ್ಲಾಧಿಕಾರಿ ಎಫ್.ಆರ್.ಜಮಾದಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ, ಜಿಪಂ ಅಧ್ಯಕ್ಷೆ ಮರೆಮ್ಮ ಶಾಣ್ಯಾನೋರ, ಜಿಪಂ ಸಿಇಒ ಎಸ್.ಎ. ಜಿಲಾನಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಜಣ್ಣ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜಗದೀಶ ಬಿ.ಎಂ. ಅವರು ತಿಳಿಸಿದ್ದಾರೆ.
'ಸದಾಶಿವ ಆಯೋಗ ಅನುಷ್ಠಾನಗೊಳ್ಳಲಿ'
ಕ.ಪ್ರ. ವಾರ್ತೆ ಯಾದಗಿರಿ ಜು.10
ನ್ಯಾ.ಸದಾಶಿವ ಆಯೋಗ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಿ, ಅದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರ ಮುಂಬರುವ ಬಜೆಟ್‌ನಲ್ಲಿ ದಲಿತರಿಗೆ ಮೀಸಲಾತಿಯನ್ನು ಘೊಷಿಸಬೇಕು ಎಂದು ಆಗ್ರಹಿಸಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು.
ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಹಣಮಂತ ಲಿಂಗೇರಿ ಮಾತನಾಡಿ, ನ್ಯಾ. ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಲು ರಾಜ್ಯ ಸರ್ಕಾರ ಕೂಡಲೆ ಕ್ರಮ ಕೈಗೊಳ್ಳಬೇಕು. ಹಿಂದುಳಿದ ದಲಿತ ಜನಾಂಗ ಇನ್ನೂ ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿದ್ದಾರೆ. ಹೀಗಾಗಿ ಆಯೋಗದ ಶಿಫಾರಸಿನಂತೆ ಛಲವಾದಿ ಜನಾಂಗಕ್ಕೆ ಶೇ.5, ಮಾದಿಗ ಜನಾಂಗಕ್ಕೆ ಶೇ.6ರಷ್ಟು, ಭೋವಿ, ಬಂಜಾರ ಇನ್ನಿತರ ಸಮುದಾಯಗಳಿಗೆ ಶೇ.3ರಷ್ಟು ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಸ್ಥಳಕ್ಕೆ ಆಗಮಿಸಿದ ಸಚಿವ ಬಾಬುರಾವ್ ಚಿಂಚನಸೂರ್ ಮನವಿ ಸ್ವೀಕರಿಸಿದರು.