ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಕ್ಯಾರಿ ಓವರ್ ಪದ್ಧತಿ ಮುಂದುವರಿಕೆಗೆ ಆಗ್ರಹಿಸಿ ಪ್ರತಿಭಟನೆ

Lingaraj Badiger
Updated On : 20 Jul 2013, 11:18 am

ಕನ್ನಡಪ್ರಭ ವಾರ್ತೆ  ಯಾದಗಿರಿ  ಜು.19
ಕ್ಯಾರಿ ಓವರ್ ಪದ್ಧತಿ ಮುಂದುವರಿಸಬೇಕು ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಡಿಪ್ಲೋಮಾ ವಿದ್ಯಾರ್ಥಿಗಳು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಶೈಕ್ಷಣಿಕ ಹಿನ್ನಡೆ: ತಹಸೀಲ್ದಾರ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ ಆಗಮಿಸಿದ ನೂರಾರು ವಿದ್ಯಾರ್ಥಿಗಳು ಅಲ್ಲಿ ಪ್ರತಿಭಟನೆ ನಡೆಸಿದರು. ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಕ್ಯಾರಿ ಓವರ್ ಪದ್ಧತಿ ಜಾರಿಗೊಳಿಸಬೇಕು. ಗುಲ್ಬರ್ಗ, ರಾಯಚೂರು, ಯಾದಗಿರಿ, ಬೀದರ್, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳು ಈಗಾಗಲೇ ಹಿಂದುಳಿದ ಪ್ರದೇಶವೆಂಬ ಹಣೆಪಟ್ಟಿ ಹಚ್ಚಿಕೊಂಡಿದ್ದು, ಶೈಕ್ಷಣಿಕವಾಗಿ ತೀರಾ ಹಿಂದುಳಿದಿವೆ. ನೂತನ ಜಿಲ್ಲೆಯಲ್ಲೂ ಡಿಪ್ಲೋಮಾ ವಿದ್ಯಾರ್ಥಿಗಳು ಅನೇಕ ಮೂಲಭೂತ ಸೌಕರ್ಯಗಳಿಂದ ವಂಚಿತರಾಗುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಿಂದ ಬರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಈ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ಸರಿಯಾಗಿ ಸಾರಿಗೆ ವ್ಯವಸ್ಥೆಯಿಲ್ಲದೆ ಕೆಲವು ತರಗತಿಗಳಿಗೆ ಹಾಜರಾಗಲು ಅನುಕೂಲವಾಗುತ್ತಿಲ್ಲ. ಆದ್ದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಡಿಪ್ಲೋಮಾ ಮೊದಲನೇ ವರ್ಷದ ಪರೀಕ್ಷೆ ಬರೆದವರಿಗೆ ಹಾಗೂ ಎರಡನೇ ವರ್ಷದ ನಾಲ್ಕನೇ ಸೆಮಿಸ್ಟರ್ ಬರೆದ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗೆ ಹೋಗಲು ಅನುಕೂಲವಾಗುವಂತೆ ಕ್ಯಾರಿ ಓವರ್ ಪದ್ಧತಿ ಜಾರಿಗೊಳಿಸಬೇಕು.
  ಅಲ್ಲದೇ ಪ್ರಾಯೋಗಿಕ ತರಗತಿಗೆ ಅನುಕೂಲವಾಗುವಂತೆ ಅಗತ್ಯ ಸಾಮಗ್ರಿ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.
  ಈ ಕುರಿತು ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವರಿಗೆ ಬರೆದ ಮನವಿಪತ್ರವನ್ನು ಅಪರ ಜಿಲ್ಲಾಧಿಕಾರಿ ಜಹೀರಾ ನಸೀಮ್ ಅವರಿಗೆ ಸಲ್ಲಿಸಿದರು. ಟೋಕರಿ ಕೋಲಿ ಸಮಾಜದ ಜಿಲ್ಲಾಧ್ಯಕ್ಷ ಉಮೇಶ ಮುದ್ನಾಳ, ಕೆಎಂಸಿ ಜಿಲ್ಲಾಧ್ಯಕ್ಷ ಚಾಂದಪಾಶಾ ಸೌದಾಗರ ನೇತೃತ್ವದಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement