ಶಾಲಾ ಪ್ರಾರಂಭೋತ್ಸವಕ್ಕೆ ಬಿಇಒ ಸಾವಳಗಿ ಚಾಲನೆ
ಕನ್ನಡಪ್ರಭ ವಾರ್ತೆ , ಗುಲ್ಬರ್ಗ , ಜೂ.1
ತಾಲೂಕಿನ ಅವರಾದ(ಬಿ) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅದ್ಧೂರಿಯಾಗಿ ಶಾಲಾ ಪ್ರಾರಂಭೋತ್ಸವಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಭರತರಾಜ ಸಾವಳಗಿ ಚಾಲನೆ ನೀಡಿದರು.
ಶಾಲಾ ಮಕ್ಕಳಿಗೆ ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಿಸಿ ಮಾತನಾಡಿ, ಶಿಕ್ಷಕರ ವೇಳಾಪಟ್ಟಿ, ಪಠ್ಯಪುಸ್ತಕ, ಪಠ್ಯ ವಿಭಜನೆ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆಯನ್ನು ಪರಿಶೀಲಿಸಿ ಸಮಾಧಾನ ವ್ಯಕ್ತಪಡಿಸಿದರು. ತಾಲೂಕಿನ ಎಲ್ಲ ಶಾಲೆಗಳಲ್ಲಿ ಈ ರೀತಿಯಾಗಿ ಪ್ರಾರಂಭೋತ್ಸವ ಆಚರಿಸುವಂತೆ ಕಿವಿಮಾತು ಹೇಳಿದರು.
ಸಮಾರಂಭದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಸೂರ್ಯಕಾಂತ ತಳವಾರ ಮತ್ತು ಮುಖ್ಯೋಪಾಧ್ಯಾಯ ಶಬ್ಬೀರ ಅಹ್ಮದ್ ಹಾಗರಗುಂಡಗಿ ಹಾಗೂ ಶಾಲಾ ಶಿಕ್ಷಕ ವೃಂದದವರು, ಶಾಲಾ ಮಕ್ಕಳು ಭಾಗವಹಿಸಿದ್ದರು.