ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

8, 9ರಂದು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ

Lingaraj Badiger
Updated On : 3 Jun 2013, 11:14 am

ಕನ್ನಡಪ್ರಭ ವಾರ್ತೆ, ಗುಲ್ಬರ್ಗ, ಜೂ.2
ಶರಣರ ಸಾಹಿತ್ಯವನ್ನು ಪ್ರಚುರಪಡಿಸುವ ಉದ್ದೇಶದಿಂದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಜೂನ್ 8 ಮತ್ತು 9ರಂದು ಎರಡು ದಿನಗಳ ಕಾಲ ನಗರದ ವಿಶ್ವೇಶ್ವರ ಭವನದಲ್ಲಿ ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ ಆಯೋಜಿಸಲು ನಿರ್ಧರಿಸಿದೆ.
ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಡಾ. ವಿಲಾಸವತಿ ಖೂಬಾ ನೇಮಕಗೊಂಡಿದ್ದು, ಜೂ.8ರಂದು ಬೆಳಗ್ಗೆ 9 ಗಂಟೆಗೆ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಪರಿಷತ್ತಿನ ಜಿಲ್ಲಾಧ್ಯಕ್ಷ ಅಪ್ಪಾರಾವ ಅಕ್ಕೋಣಿ ಮತ್ತು ಸ್ವಾಗತ ಸಮಿತಿ ಅಧ್ಯಕ್ಷ ಅಲ್ಲಂಪ್ರಭು ಪಾಟೀಲ್ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅಂದು ಬೆಳಗ್ಗೆ 10 ಗಂಟೆಗೆ ಭಾಲ್ಕಿಯ ಹಿರೇಮಠ ಸಂಸ್ಥಾನದ ಡಾ. ಬಸವಲಿಂಗ ಪಟ್ಟದೇವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿಲಾಸವತಿ ಖೂಬಾ ಅವರು ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಗೊ.ರು. ಚನ್ನಬಸಪ್ಪ, ಉಪಾಧ್ಯಕ್ಷ ಚಂದ್ರಕಾಂತ ಬೆಲ್ಲದ್ ಆಗಮಿಸಲಿದ್ದಾರೆ ಎಂದರು.
ಡಾ. ಮಹಾಂತ ಶಿವಯೋಗಿಗಳು ಸಾನ್ನಿಧ್ಯ ವಹಿಸಲಿದ್ದಾರೆ. ಗುರುಮಹಾಂತ ಶಿವಯೋಗಿಗಳು ನೇತೃತ್ವ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಶಾಸಕ ಬಿ.ಆರ್. ಪಾಟೀಲ್ ಪರಿಷತ್ತಿನ ಪ್ರಕಟಣೆಗಳನ್ನು ಬಿಡುಗಡೆಗೊಳಿಸಲಿದ್ದಾರೆ.
ಜೂ.9ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ಎರಡನೇ ಗೋಷ್ಠಿಯಲ್ಲಿ ಡಾ. ಟಿ.ಎಂ. ಭಾಸ್ಕರ್ ಅವರು ರಾಮಪುರ ಬಕ್ಕಪ್ಪ ಕುರಿತು ಉಪನ್ಯಾಸ ನೀಡಲಿದ್ದಾರೆ, ಡಾ. ಚಂದ್ರಕಲಾ ಬಿದರಿ ಅವರು ಐನೂಲಿ ಕರಿಬಸವಾರ್ಯರು ಕುರಿತು ಮತ್ತು ಶಂಕರ ದೇವನೂರ ಅವರು ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ವಿವರಿಸಿದರು.
ಮಧ್ಯಾಹ್ನ 12ಕ್ಕೆ ಆಧುನಿಕ ವಚನಗೋಷ್ಠಿ ನಡೆಯಲಿದೆ. 2 ಗಂಟೆಗೆ ನಡೆಯುವ ಮೂರನೇ ಗೋಷ್ಠಿಯಲ್ಲಿ ಡಾ. ಮಲ್ಲಿಕಾರ್ಜುನ ಮೇತ್ರಿ ಅವರು ಹರ್ಡೇಕರ್ ಮಂಜಪ್ಪ ಕುರಿತು ಮತ್ತು ಡಾ. ಬಸವರಾಜ ಬಲ್ಲೂರ ಅವರು ಡಾ. ಜಯದೇವಿತಾಯಿ ಲಿಗಾಡೆ ಕುರಿತು ಉಪನ್ಯಾಸ ನೀಡಲಿದ್ದಾರೆ. ಸಂಜೆ 4ಕ್ಕೆ ವಚನ ಸಂಗೀತ ಕಾರ್ಯಕ್ರಮ ನಡೆಯಲಿದೆ. ಸಂಜೆ 4.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.

ಪುಸ್ತಕ ಪ್ರದರ್ಶನ
ಗುಲ್ಬರ್ಗ: ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಗರದ ಜಿಲ್ಲಾ ಕೋರ್ಟ್ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ ಭವನದಲ್ಲಿ ಜೂನ್ 8ರಿಂದ 9ರವರೆಗೆ ಪುಸ್ತಕ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಏರ್ಪಡಿಸಲಾಗಿದೆ. ಸಮ್ಮೇಳನದ ಅಂಗವಾಗಿ ಏರ್ಪಡಿಸಿದ 'ವಚನಚಿತ್ರ' ಸ್ಪರ್ಧೆಯಲ್ಲಿ ಭಾಗವಹಿಸಿದ ಕಲಾವಿದರ ಚಿತ್ರಕಲಾ ಪ್ರದರ್ಶನ ಏರ್ಪಡಿಸಲಾಗಿದೆ. ಸಾರ್ವಜನಿಕರು ಇದರ ಲಾಭ ಪಡೆಯಬೇಕಾಗಿ ಪ್ರದರ್ಶನ ಸಂಚಾಲಕ ಸೂರ್ಯಕಾಂತ ಸೊನ್ನದ ತಿಳಿಸಿದ್ದಾರೆ. ವಿವರಕ್ಕೆ 92418 04719ಗೆ ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement