ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಡೆಂಘೀ ಬಗ್ಗೆ ಭಯ ಬೇಡ, ಜಾಗೃತಿ ಇರಲಿ: ನರಿಬೋಳಿ

Vishwanath S
Updated On : 18 Jun 2013, 11:32 am

ಯಾದಗಿರಿ: ಡೆಂಘೀ ಜ್ವರದ ಬಗ್ಗೆ ಹೆದರಿಕೆ ಬೇಡ. ಆದರೆ ಅದು ಬರದಂತೆ ಜಾಗೃತಿ ವಹಿಸುವ ಅಗತ್ಯವಿದೆ ಎಂದು ತಾಲೂಕು ಆರೋಗ್ಯಧಿಕಾರಿ ಡಾ. ಚಂದ್ರಕಾಂತ ನರಿಬೋಳಿ ಹೇಳಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ವೈರಸ್‌ನಿಂದ ಉಂಟಾಗುವ ಕಾಯಿಲೆ ಇದಾಗಿದ್ದು, ಸೋಂಕು ಹೊಂದಿದ ಈಡಿಸ್ ಇಜಿಪ್ಟೈ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ರೋಗ ಹರಡುತ್ತದೆ. ಈ ಸೊಳ್ಳೆಗಳು ಸಾಮನ್ಯವಾಗಿ ಸ್ವಚ್ಛ ನೀರಿನಲ್ಲಿ ಸಂತಾನಭಿವೃದ್ಧಿ ಮಾಡುತ್ತವೆ ಹಾಗೂ ಹಗಲು ಹೊತ್ತಿನಲ್ಲಿ ಮನುಷ್ಯರನ್ನು ಕಚ್ಚುತ್ತವೆ.
ರೋಗದ ಲಕ್ಷಣಗಳು: ಈ ರೋಗದ ಮುಖ್ಯ ಲಕ್ಷಣಗಳೆಂದರೆ ಇದ್ದಕ್ಕಿದ್ದಂತೆ ತೀವ್ರ ಜ್ವರ, ತಲೆನೋವು, ಕಣ್ಣುಗಳ ಹಿಂಭಾಗ ನೋವು, ಮಾಂಸ ಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುವುದು. ತೀವ್ರ ಸ್ಥಿತಿಯಲ್ಲಿ ರೊಗವಿದ್ದಾಗ ಬಾಯಿ, ಮೂಗು ಮತ್ತು ವಸಡುಗಳಿಂದ ರಕ್ತಸ್ರಾವ ಹಾಗೂ ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತುಗಳು ಕಾಣಿಸಿಕೊಳ್ಳುತ್ತವೆ. ಇಂತಹ ಲಕ್ಷಣಗಳು ಕಂಡುಬಂದ ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ರಕ್ತ ಪರೀಕ್ಷೆ ಪಡೆಯಬೇಕೆಂದು ತಿಳಿಸಿದ್ದಾರೆ.
ಮುಂಜಾಗ್ರತಾ ಕ್ರಮ: ತಾಲೂಕಿನಲ್ಲಿ ಜನವರಿಯಿಂದ ಈವರೆಗೆ 1 ಡೆಂಘೀ ಜ್ವರ ಪ್ರಕರಣ ದೃಢಪಟ್ಟಿದ್ದು, ಯಾವುದೇ ಜೀವಹಾನಿ ಸಂಭವಿಸಿಲ್ಲ. ಮಳೆಗಾಲದ ಹಾಗೂ ನಂತರದ ಅವಧಿಯಲ್ಲಿ ಹೆಚ್ಚಿನ ಪ್ರಕರಣಗಳು ಕಂಡುಬರುವ ಸಂಭವ ಇರುವುದರಿಂದ ತಾಲೂಕಿನಾದ್ಯಂತ ಈ ರೋಗ ನಿಯಂತ್ರಣದ ಬಗ್ಗೆ ಅರಿವು ಮೂಡಿಸುವ ಮತ್ತು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಈ ರೋಗವನ್ನು ನಿಯಂತ್ರಿಸಲು ಸೋರ್ಸ್ ರಿಡಕ್ಷನ್ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದಿದ್ದಾರೆ.

ಮೈಲಾಪುರದಲ್ಲಿ ಡೆಂಘೀ ಅರಿವು
ಯಾದಗಿರಿ: ಡೆಂಘೀ ಜ್ವರ ನಿಯಂತ್ರಣ ಮತ್ತು ಅದು ಬರದಂತೆ ಮುಂಜಾಗ್ರತೆ ಕೈಗೊಳ್ಳುವ ಕುರಿತು ತಿಳಿವಳಿಕೆ ಮೂಡಿಸುವ ಕಾರ್ಯಕ್ರಮವನ್ನು ಇಲ್ಲಿಗೆ ಸಮೀಪದ ಮೈಲಾಪುರ ಗ್ರಾಮದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಸ್ಥಳೀಯ ಹೋಮಿಯೋಪತಿ ಆಸ್ಪತ್ರೆಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಪ್ರಕಾಶ ರಾಜಾಪುರ, ಸೊಳ್ಳೆ ನಿಯಂತ್ರಣವೇ ಡೆಂಘೀ ಜ್ವರ ಬರದಂತೆ ತಡೆಯಲು ಪರಿಹಾರ ಎಂದರು. ಪರಿಸರ ಸ್ವಚ್ಛತೆ ಇಟ್ಟುಕೊಳ್ಳುವ ಮೂಲಕ ನಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಸಲಹೆ ನೀಡಿ, ಹೋಮಿಯೋಪತಿ ಔಷಧಿಗಳನ್ನು ವಿತರಿಸಲಾಯಿತು. ಕಲಾವತಿ ಇದ್ದರು. ಮಲ್ಲಿಕಾರ್ಜುನ ಸ್ವಾಗತಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement