'ಹೈ.ಕ. ವಿದ್ಯಾರ್ಥಿಗಳಿಗೆ ಅನ್ಯಾಯ'
ಗುಲ್ಬರ್ಗ: ನಗರದ ಸರ್ಕಾರಿ ಪಾಲಿಟೆಕ್ನಿಕ್ನಲ್ಲಿ ಅಟೋಮೊಬೈಲ್ ಎಂಜಿನಿಯರಿಂಗ್ ವಿಭಾಗವನ್ನು ಪ್ರಾರಂಭಿಸಿ 50 ಜನ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ಎಐಸಿಟಿಇ ಅನುಮೋದನೆಯನ್ನು 2009ರಲ್ಲಿಯೇ ನೀಡಿರುತ್ತದೆ. ಆದರೆ ಇದುವರೆಗೂ ವಿದ್ಯಾರ್ಥಿಗಳಿಗೆ ಅಟೋಮೊಬೈಲ್ ಎಂಜಿನಿಯರಿಂಗ್ ವಿಭಾಗಕ್ಕೆ ಪ್ರವೇಶ ನೀಡದೆ ಹಿಂದುಳಿದ ಹೈ-ಕ ಭಾಗದ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದೆ ಎಂದು ಹೈ.ಕ. ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಉಮಾಕಾಂತ ನಿಗ್ಗುಡಗಿ ಹಾಗೂ ಗೌರವ ಕಾರ್ಯದರ್ಶಿ ಬಸವರಾಜ ಹಡಗಿಲ್ ಆಗ್ರಹಿಸಿದ್ದಾರೆ. ಹೈ-ಕ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಉದ್ಯೋಗದ ಹಿತದೃಷ್ಟಿಯಿಂದ ಪ್ರಸ್ತುತ ಶೈಕ್ಷಣಿಕ ವರ್ಷ 2013-14ರಿಂದಲೇ ಗುಲ್ಬರ್ಗ ಸರ್ಕಾರಿ ಪಾಲಿಟೆಕ್ನಿಕ್ನಲ್ಲಿ ಅಟೋಮೊಬೈಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಪ್ರವೇಶ ಪ್ರಕ್ರಿಯೆ ಪ್ರಾರಂಭಿಸಲು ಆದೇಶ ಹೊರಡಿಸಬೇಕೆಂದು ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆಗೆ ಬರೆದ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.