ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ವ್ಯವಸ್ಥಿತ ಮತ ಎಣಿಕೆ ಕಾರ್ಯ ನಡೆಸಿ: ಜಿಲ್ಲಾಧಿಕಾರಿ

Parashurama
Updated On : 10 Mar 2013, 11:59 am

ಯಾದಗಿರಿ: ಜಿಲ್ಲೆಯ ನಾಲ್ಕು ನಗರಸ್ಥಳಿಯ ಸಂಸ್ಥೆಗಳ ಚುನಾವಣೆಗೆ ಸಂಬಂಧಪಟ್ಟಂತೆ ಮಾ.11ರಂದು ನಡೆಯಲಿರುವ ಮತ ಎಣಿಕೆ ಕಾರ್ಯವು ಸುಸೂತ್ರವಾಗಿ, ಕಾನೂನಿನ ಚೌಕಟ್ಟಿನ ಅಡಿಯಲ್ಲಿ ಯಾವುದೇ ಲೋಪ ಆಗದಂತೆ ನಡೆಯುವಂತೆ ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸಲಹೆ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು, ಚುನಾವಣೆಗೆ ನೇಮಕಗೊಂಡ ನೋಡಲ್ ಅಧಿಕಾರಿಗಳು ಹಾಗೂ ಆಪರೇಟರ್‌ಗಳೊಂದಿಗೆ ಮತ ಏಣಿಕೆ ನಡೆಸುವ ಕುರಿತು ಶನಿವಾರ ನಡೆಸಿದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಸಲಹೆ ನೀಡಿದರು.
ಮಾ.11ರಂದು ಜಿಲ್ಲೆಯ ನಾಲ್ಕು ನಗರಸ್ಥಳೀಯ ಸಂಸ್ಥೆಗಳಾದ ಯಾದಗಿರಿ ನಗರಸಭೆ, ಗುರುಮಠಕಲ್ ಪಟ್ಟಣ ಪಂಚಾಯಿತಗಳಿಗೆ ಸಂಬಂಧಪಟ್ಟಂತೆ ಯಾದಗಿರಿಯಲ್ಲಿ ಹಾಗೂ ಶಹಾಪೂರ ಪುರಸಭೆಗೆ ಸಂಬಂಧಪಟ್ಟಂತೆ ಬೇವಿನಹಳ್ಳಿಯಲ್ಲಿ ಹಾಗೂ ಸುರಪುರ ಪುರಸಭೆಗೆ ಸಂಬಂಧಿಸಿದಂತೆ ಸುರಪುರದಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಈ ಕಾರ್ಯಕ್ಕೆ ನಿಯೋಜನೆಗೊಂಡ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ಚುನಾವಣಾ ಆಯೋಗವು ನೀಡಿರುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿದರು.
ಲೋಪವಾಗದಿರಲಿ: ಮಾ.11ರಂದು ಬೆಳಗ್ಗೆ 7 ಗಂಟೆ ಒಳಗಾಗಿ ಆಯಾ ಮತ ಎಣಿಕೆ ಕೇಂದ್ರಗಳಲ್ಲಿ ಉಪಸ್ಥಿತರಿದ್ದು, ಮತ ಎಣಿಕೆಗೆ ಕೈಗೊಳ್ಳಬೇಕಾದ ಎಲ್ಲಾ ಪೂರ್ವ ಸಿದ್ಧತಾ ಕ್ರಮಗಳನ್ನು ಕೈಗೊಳ್ಳಬೇಕು. ಮತಎಣಿಕೆ ಕಾರ್ಯ ಅಚ್ಚುಕಟ್ಟಾಗಿ ಹಾಗೂ ಲೋಪವಾಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ಮಾತನಾಡಿ, ಮತ ಎಣಿಕೆ ಕಾರ್ಯವು ಶಾಂತಿಯುತ ಹಾಗೂ ವ್ಯವಸ್ಥಿತವಾಗಿ ನಡೆಯಲು ಅನುಕುಲವಾಗುವಂತೆ ಮತದಾನ ಕೇಂದ್ರಗಳ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗುವುದು. ಮತ ಎಣಿಕೆ ನಡೆದ ನಂತರ ಯಾವುದೇ ವಿಜಯೋತ್ಸವ, ಮೆರವಣಿಗೆ, ಪಟಾಕಿಗಳನ್ನು ಹಾರಿಸುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ತಿಳಿಸಿದರು. ಅಪರ ಜಿಲ್ಲಾಧಿಕಾರಿ ಜಹೀರಾ ನಸೀಮ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments