ಯುಪಿಎ ಸರ್ಕಾರ ಶೀಘ್ರ ಪತನ
ಕನ್ನಡಪ್ರಭ ವಾರ್ತೆ , ರಾಯಚೂರು , ಮೇ 25
ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತ ಎಂದು ಮಾಜಿ ಸಚಿವ ಗೊವಿಂದ ಕಾರಜೋಳ ಭವಿಷ್ಯ ನುಡಿದರು.
ಅವರು ಶುಕ್ರವಾರ ಸಂಜೆ ನಗರದಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶ ಹಾಗೂ ನೂತನ ಶಾಸಕರ ಸನ್ಮಾನ ನೆರವೇರಿಸಿ ಮಾತನಾಡಿದ ಅವರು, 'ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯಗಳಿಂದಾಗಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲಾಗಿದೆ. ಕಾರ್ಯಕರ್ತರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ್ದಾರೆ. ಸೋಲು ಗೆಲುವಿಗೆ ಸೋಪಾನ' ಎಂದು ಹೇಳಿದರು.
ಚುನಾವಣೆಯಲ್ಲಿನ ಸೋಲಿನಿಂದ ಅಭ್ಯರ್ಥಿಗಳು, ಕಾರ್ಯಕರ್ತರು ನಿರಾಶರಾಗದೇ ಲೋಕಸಭೆ ಚುನಾವಣೆಗೆ ಪಕ್ಷವನ್ನು ಬಲಪಡಿಸುವ ಹಿನ್ನೆಲೆಯಲ್ಲಿ ಸದಸ್ಯತ್ವ ಅಭಿಯಾನ ಮತ್ತು ಸಕ್ರಿಯ ಕಾರ್ಯಕರ್ತರ ನೋಂದಣಿ ಕಾರ್ಯ ಆರಂಭಿಸಿಬೇಕು ಎಂದು ಹೇಳಿದರು.
ವಿಧಾನ ಪರಿಷತ್ತಿನ ಮಾಜಿ ಸದಸ್ಯ ಹಾಗೂ ರಾಜ್ಯ ಕಾರ್ಯದರ್ಶಿ ರಘುನಾಥ ಮಲ್ಕಾಪುರೆ ಮಾತನಾಡಿದರು.
ಈ ಸಂದರ್ಭದಲ್ಲಿ ಗ್ರಾಮಾಂತರ ಕ್ಷೇತ್ರದಿಂದ ಶಾಸಕ ತಿಪ್ಪರಾಜ ಅವರನ್ನು ಸನ್ಮಾನಿಸಲಾಯಿತು.
ಪ್ರಾಸ್ತಾವಿಕವಾಗಿ ಅಶೋಕ ಗಸ್ತಿ ಮಾತನಾಡಿದರು. ಪಕ್ಷದ ಜಿಲ್ಲಾಧ್ಯಕ್ಷ ಬಸನಗೌಡ ಬ್ಯಾಗವಾಟ್ ಮತ್ತು ಎಪಿಎಂಸಿ ಅಧ್ಯಕ್ಷ ಆರ್.ತಿಮ್ಮಯ್ಯ ಮಾತನಾಡಿದರು.