'ಕೆಂಭಾವಿ ತಾಲೂಕಾಗಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಿ'
ಬೆಂಗಳೂರು: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯನ್ನು ತಾಲೂಕು ಕೇಂದ್ರವಾಗಿ ಘೋಷಿಸಬೇಕು ಎಂಬ ಮನವಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಆದೇಶಿಸಿರುವ ಹೈಕೋರ್ಟ್, ಮನವಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಆದೇಶಿಸಿದೆ.
ಕೆಂಭಾವಿ ತಾಲೂಕು ರಚನೆ ಹೋರಾಟ ಸಮಿತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ.ಡಿ.ಎಚ್. ವಘೇಲ ಹಾಗೂ ನ್ಯಾ.ಬಿ.ವಿ. ನಾಗರತ್ನ ಅವರಿದ್ದ ವಿಭಾಗೀಯ ಪೀಠ, ಅರ್ಜಿಯನ್ನು ಇತ್ಯರ್ಥಗೊಳಿಸಿದೆ.
13 ಗ್ರಾಮ ಪಂಚಾಯ್ತಿ ಹಾಗೂ 62 ಹಳ್ಳಿಗಳನ್ನು ಒಳಗೊಂಡಿರುವ ಕೆಂಭಾವಿಯನ್ನು ತಾಲೂಕು ಕೇಂದ್ರವಾಗಿ ಘೋಷಿಸಬೇಕು ಎಂದು 2009ರಲ್ಲಿ ಎಂ.ಬಿ. ಪ್ರಕಾಶ್ ಅವರ ಸಮಿತಿ ವರದಿ ನೀಡಿದೆ. ಇದನ್ನು ಜಾರಿಗೆ ತರುವಂತೆ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಕೆಂಬಾವಿಯಿಂದ ಸುರಪುರಕ್ಕೆ ಸಾಕಷ್ಟು ಅಂತರವಿರುವ ಹಿನ್ನೆಲೆಯಲ್ಲಿ ಸಣ್ಣಪುಟ್ಟ ಕೆಲಸಗಳಿಗೆ ಜನಸಾಮಾನ್ಯರು ದಿನವಿಡೀ ಪ್ರಯಾಣಿಸುವ ಸಂಕಷ್ಟ ಎದುರಿಸಬೇಕಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.