'ಸಮಸ್ಯೆ ಪರಿಹಾರಕ್ಕೆ ಸ್ಪಂದಿಸಬೇಕು'
ಯಾದಗಿರಿ: ರಸ್ತೆ, ಕುಡಿವ ನೀರು ಸೇರಿದಂತೆ ಗ್ರಾಮೀಣ ಭಾಗದ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಎಲ್ಲಾ ರೀತಿಯ ನೆರವು ನೀಡುತ್ತಿದ್ದು, ಅಧಿಕಾರಿಗಳು ವಿಳಂಬ ಮಾಡದೇ ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರಗತಿಯಲ್ಲಿ ಸ್ಪಂದಿಸಬೇಕು ಎಂದು ಜವಳಿ, ಬಂದರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಾಬುರಾವ್ ಚಿಂಚನಸೂರ ಹೇಳಿದರು.
ತಾಲೂಕಿನ ಗುರುಮಠಕಲ್ ಸಮೀಪದ ಮಾಡೇಪಲ್ಲಿ ಗ್ರಾಮದಲ್ಲಿ ಮಂಗಳವಾರ ಏರ್ಪಡಿಸಿದ್ದ ಕುಂದುಕೊರತೆ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಮಾಡೇಪಲ್ಲಿ ಗ್ರಾಮಸ್ಥರು ರಸ್ತೆ, ಕುಡಿವ ನೀರು, ನೈರ್ಮಲ್ಯ ಸೇರಿದಂತೆ ಗ್ರಾಮದ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಸಲ್ಲಿಸಿದರು. ರಸ್ತೆ ಡಾಂಬರೀಕರಣ ಹಾಗೂ ಕುಡಿವ ನೀರಿನ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಸರ್ಕಾರ ಬಡಜನರ ಅನುಕೂಲಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳನ್ನು ತಲುಪಿಸಲು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಬಾರದು. ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ತಮ್ಮ ಮೊದಲ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಅಭಿವೃದ್ಧಿಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದರು.
ಮಾಡೇಪಲ್ಲಿಯಿಂದ ಸದನ್ಪೂರ ರಸ್ತೆ ಸಂಪರ್ಕ ಕಲ್ಪಿಸಬೇಕು. ಮಾಡೇಪಲ್ಲಿಯಿಂದ ಚಂಡ್ರಕಿಯವರೆಗೆ ಅತಿವೃಷ್ಟಿಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ನೀಡಲಾಗುವುದು.
ಕೇಂದ್ರ ರೇಲ್ವೆ ಮಂತ್ರಿ ಮಲ್ಲಿಕಾರ್ಜುನ ಖರ್ಗೆ ಅವರ ಶ್ರಮದಿಂದಾಗಿ ಹೈದರಾಬಾದ್ ಕರ್ನಾಟಕ ಭಾಗಕ್ಕೆ 371 ಕಲಂ ವಿಶೇಷ ಸ್ಥಾನಮಾನ ದೊರೆತಿದ್ದು, ಅಭಿವೃದ್ಧಿಗೆ ಈ ಭಾಗಕ್ಕೆ ಹೆಚ್ಚಿನ ಅನುದಾನ ಬರಲಿದೆ.
ಆದ್ದರಿಂದ ಈ ಭಾಗ ಅಭಿವೃದ್ಧಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.
ಗ್ರಾಮದಲ್ಲಿ ಸಿಸಿ ರಸ್ತೆ, ಒಳಚರಂಡಿ, ಸಮುದಾಯಭವನ ನಿರ್ಮಾಣದ ಬಗ್ಗೆ ಕ್ರಮ ಕೈಗೊಳ್ಳವುದಾಗಿ ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು.
ತಹಸೀಲ್ದಾರ ಗುರುಪಾಟೀಲ, ಜಿಪಂ ಅಧ್ಯಕ್ಷೆ ಭೀಮಮ್ಮ ಚಪೇಟ್ಲ ಇತರರು ಇದ್ದರು.