ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ

Rashmi Kasaragodu
Updated On : 12 Nov 2013, 11:54 am

ಕನ್ನಡಪ್ರಭ ವಾರ್ತೆ  ಜೇವರ್ಗಿ  ನ.11
ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳು ಕಳಪೆ ಮತ್ತು ಕಾಮಗಾರಿ ವಿಳಂಬವಾದರೆ ಸಹಿಸುವುದಿಲ್ಲ ಎಂದು ಶಾಸಕ ಡಾ. ಅಜಯಸಿಂಗ್ ಅಧಿಕಾರಿಗಳಿಗೆ ಎಚ್ಚರಿಸಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಈಗಾಗಲೇ ಭೂಸೇನಾ ನಿಗಮಕ್ಕೆ ಸಮರ್ಪಕ ಅನುದಾನ ಬಿಡುಗಡೆಯಾದರೂ ಡಾ. ಅಂಬೇಡ್ಕರ್ ಕಲ್ಯಾಣ ಮಂಟಪ ಕಾಮಗಾರಿ ಮಂದಗತಿಯಲ್ಲಿ ನಡೆಯುತ್ತಿದ್ದು, ತ್ವರಿತಗತಿಯಲ್ಲಿ ಕಾಮಗಾರಿ ನಿರ್ವಹಿಸಲು ಸೂಚಿಸಿದರು.
ನಿರ್ದಾಕ್ಷಿಣ್ಯ ಕ್ರಮದ ಎಚ್ಚರಿಕೆ: ನಿಗಮದ ಅಡಿಯಲ್ಲಿ ಅದೆಷ್ಟೋ ಕಾಮಗಾರಿಗಳು ಅಪೂರ್ಣ ಹಂತದಲ್ಲಿವೆ. ಅವುಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ತಾಲೂಕಿನ ಎಲ್ಲ ಕಾಮಗಾರಿಗಳನ್ನು ನಿಗದಿತ ಸಮಯಕ್ಕೆ ಪೂರ್ಣಗೊಳಿಸಿ ಗುಣಮಟ್ಟದ ಕಾಮಗಾರಿಗೆ ಹೆಚ್ಚಿನ ಒತ್ತು ನೀಡಬೇಕು. ಯಾವುದೇ ಇಲಾಖೆಯ ಕಳಪೆ ಕಾಮಗಾರಿ ನಡೆದರೆ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ತಾವು ಶಿಫಾರಸ್ಸು ಮಾಡುವುದಾಗಿ ಶಾಸಕರು ಎಚ್ಚರಿಸಿದರು.
ಕೃಷಿ ಇಲಾಖೆಯ ಅಧಿಕಾರಿಗಳು ವರದಿ ವಾಚನ ಮಾಡುತ್ತಿದಂತೆಯೇ ಶಾಸಕ ಡಾ. ಅಜಯಸಿಂಗ್ ಅವರು ಸರ್ಕಾರದ ಯೋಜನೆಗಳು ಅರ್ಹ ರೈತ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಹಾಗೂ ರೈತರು ಹೆಚ್ಚಿನ ಇಳುವರಿ ಪಡೆಯುವ ನಿಟ್ಟಿನಲ್ಲಿ ಹಳ್ಳಿಗಳಲ್ಲಿ ರೈತರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಾಕಿಕೊಳ್ಳುವಂತೆ ಕೃಷಿ ಇಲಾಖೆಗೆ ಸೂಚಿಸಿದರು.
ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಡಿ ಕಳೆದ ಸಾಲಿನಿಂದ ಭಾಗ್ಯಲಕ್ಷ್ಮೀ ಯೋಜನೆಯಡಿ ಗಣನೀಯ ಸಾಧನೆ ಕಂಡು ಬಂದಿಲ್ಲ. ಕೂಡಲೇ ಅರ್ಹ ಫಲಾನುಭವಿಗಳಿಗೆ ಯೋಜನೆ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗುವಂತೆ ಹೇಳಿದ ಶಾಸಕರು, ಮಕ್ಕಳಿಗೆ ಪೌಷ್ಟಿಕ ಗುಣಮಟ್ಟದ ಆಹಾರ ನೀಡಬೇಕು. ತಾವು ಕೂಡ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸುವುದಾಗಿ ಹೇಳಿದರು.
ಮೇಲ್ವಿಚಾರಕರ ಗೈರು- ಎಚ್ಚರಿಕೆ: ಕಳೆದ ಕೆಲವು ದಿನಗಳ ಹಿಂದೆ ವಿಷಾಹಾರ ಸೇವನೆಯಿಂದ ಸಮಾಜ ಕಲ್ಯಾಣ ಇಲಾಖೆಯಡಿಯ ವಸತಿ ನಿಲಯದ ಮಕ್ಕಳು ಅಸ್ವಸ್ಥಗೊಂಡಿದ್ದರು. ಅಷ್ಟಾಗಿಯೂ ಕೆಲವು ವಸತಿ ನಿಲಯಗಳಲ್ಲಿ ಮೇಲ್ವಿಚಾರಕರ ಬದಲು ಖಾಸಗಿ ವ್ಯಕ್ತಿಗಳನ್ನು ಸಹಾಯಕರಾಗಿ ನೇಮಿಸಿ ಮೆಲ್ವಿಚಾರಕರು ಗೈರಾಗುತ್ತಿದ್ದಾರೆ. ಇದು ಮಕ್ಕಳಿಗೆ ಮಾರಕವಾಗಬಹುದು. ಕೂಡಲೇ ಮೆಲ್ವಿಚಾರಕರೇ ನಿಲಯಗಳಲ್ಲಿ ಖುದ್ದಾಗಿರಬೇಕು. ಇಲ್ಲದಿದ್ದಲ್ಲಿ ಪರ್ಯಾಯ ವ್ಯವಸ್ಥೆ ಮಾಡುವುದು ತಮಗೆ ಗೊತ್ತು ಎಂದು ಖಾರವಾಗಿ ಸಮಾಜ ಕಲ್ಯಾಣ ಅಧಿಕಾರಿಗಳಿಗೆ ಎಚ್ಚರಿಸಿದರು.
ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಪಂ ಅಧ್ಯಕ್ಷ ಮಲ್ಲಣ್ಣಗೌಡ ಪಾಟೀಲ್ ನೇದಲಗಿ, ಉಪಾಧ್ಯಕ್ಷೆ ವಿಜಯಲಕ್ಷ್ಮೀ ಆಂದೋಲಾ, ತಹಸೀಲ್ದಾರ್ ಮಲ್ಲಿಕಾರ್ಜುನರೆಡ್ಡಿ ಪಾಟೀಲ್, ತಾಪಂ ಇಒ ಪಲ್ಲಾನರಸಿಂಹ ರೆಡ್ಡಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement