ಸಂಚಾರಕ್ಕೆ ಕಿರಿಕಿರಿಯಾದ ಅನಧಿಕೃತ ಶೆಡ್
ಚಿಂಚೋಳಿ: ಚಿಂಚೋಳಿ ಪಟ್ಟಣದಲ್ಲಿ ದಿನೇ ದಿನೇ ಜನದಟ್ಟಣೆ ಹೆಚ್ಚುತ್ತಿದ್ದು, ರಸ್ತೆ ಬದಿಯಲ್ಲಿ ಅನಧಿಕೃತವಾಗಿ ಶೆಡ್ ನಿರ್ಮಾಣ ಕಾರ್ಯ ನಡೆಯುತ್ತಿದೆ. ಇದರಿಂದ ಪಾದಚಾರಿಗಳು, ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಕೂಡಲೇ ಈ ಅಕ್ರಮ ಅಂಗಡಿಗಳನ್ನು ತೆರವುಗೊಳಿಸಬೇಕೆಂದು ಸಮಾಜವಾದಿ ಜಿಲ್ಲಾಧ್ಯಕ್ಷ ಅಮೃತರಾವ್ ಗುತ್ತೇದಾರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅವರನ್ನು ಒತ್ತಾಯಿಸಿದ್ದಾರೆ.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಂಚೋಳಿ ಪಟ್ಟಣದಲ್ಲಿ ಹಾದು ಹೋಗಿರುವ ರಾಜ್ಯ ಹೆದ್ದಾರಿ ಇದಾಗಿದೆ. ಆದರೆ, ಬಸ್ ನಿಲ್ದಾಣ ಮುಂದುಗಡೆ ಹಾಗೂ ಪಟ್ಟಣ ಪಂಚಾಯಿತಿಯಿಂದ ನ್ಯಾಯಾಲಯ ಮತ್ತು ಸಣ್ಣ ಸೇತುವೆವರೆಗೆ 50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಒಳಚರಂಡಿ ಮೇಲೆ ಕೆಲವು ಚುನಾಯಿತ ಜನಪ್ರತಿನಿಧಿಗಳಿಗೆ ಅಕ್ರಮವಾಗಿ ಚರಂಡಿ ಮೇಲೆ ಮಾಂಸದಂಗಡಿ, ಮಿಲ್ಟ್ರಿ ಖಾನಾವಳಿ ಮತ್ತು ಚಹಾ ಅಂಗಡಿಗಳನ್ನು ಕಟ್ಟಿ ಬಾಡಿಗೆ ನೀಡಲಾಗುತ್ತಿದೆ ಎಂದು ಆರೋಪಿಸಿದರು.
ಬಸ್ ನಿಲ್ದಾಣದಲ್ಲಿ ಪ್ರವೇಶದ್ವಾರದ ಗೇಟಿನ ಎದುರೇ ಕೋಳಿ ಮತ್ತು ಕುರಿ ಮಾಂಸ ಮಾರಾಟ ಮಾಡಲಾಗುತ್ತಿದೆ. ಇದರಿಂದ ಬಸ್ ನಿಲ್ದಾಣ ಹತ್ತಿರ ಬೀದಿನಾಯಿ ಹಾವಳಿ ಹೆಚ್ಚಾಗಿದೆ. ಇದರಿಂದಾಗಿ ಅನೇಕ ಪ್ರಯಾಣಿಕರು ನಾಯಿ ಕಡಿತದಿಂದ ಗಾಯಗೊಂಡಿದ್ದಾರೆ. ವಿಪರೀತ ಗಬ್ಬು ವಾಸನೆಯಿಂದಾಗಿ ಪ್ರಯಾಣಿಕರು ಕಿರಿಕಿರಿ ಅನುಭವಿಸುವಂತಾಗಿದೆ. ಈ ಬಗ್ಗೆ ಅನೇಕ ಬಾರಿ ಸ್ಥಳೀಯ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮತ್ತು ಪೊಲೀಸ್ ಅಧಿಕಾರಿಗಳಿಗೆ ಕ್ರಮಕ್ಕೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಮತ್ತು ಸ್ಥಳೀಯ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ಮತ್ತು ಲೋಕೋಪಯೋಗಿ ಅಧಿಕಾರಿಗಳು ಕೂಡಲೇ ಗಮನಹರಿಸಿ ಅಕ್ರಮ ಅಂಗಡಿಗಳನ್ನು ತೆರವುಗೊಳಿಸಿ ಜನರಿಗೆ ಅನುಕೂಲವಾಗುವಂತೆ ಕ್ರಮ ಕೈಕೊಳ್ಳಬೇಕು. ಇದರ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯೆ ವಹಿಸಿದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಬರುವ ವಾರದಲ್ಲಿ ಪ್ರತಿಭಟನೆ ನಡೆಸಲಾಗುವುದೆಂದು ಅವರು ಎಚ್ಚರಿಸಿದರು.