ಕ್ರೀಡಾ ಪ್ರತಿಭೆಗೆ ಪ್ರೋತ್ಸಾಹ ನೀಡಿ: ಶಾಣಪ್ಪ
ಗುಲ್ಬರ್ಗ: ಜಿಲ್ಲೆಯಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿದ್ದು, ಅವರ ಕ್ರೀಡಾ ಸಾಧನೆಯನ್ನು ಗುರುತಿಸಿ ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹಿಸಬೇಕು. ಕ್ರೀಡಾಪಟುಗಳು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ವಿಜೇತರಾಗುವಂತೆ ತರಬೇತಿಗಳನ್ನು ನೀಡಬೇಕೆಂದು ವಿಪ ಸದಸ್ಯ ಕೆ.ಬಿ.ಶಾಣಪ್ಪ ಹೇಳಿದರು.
ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕ ಗುಲ್ಬರ್ಗ ಇವುಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪ್ರಸಕ್ತ ಸಾಲಿನ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರಿ ನೌಕರರು ಪ್ರತಿದಿನ ನಾಗರಿಕರ ಸೇವೆಯ ಒತ್ತಡದಲ್ಲಿರುತ್ತಾರೆ. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಶ್ರಮದ ಜತೆಗೆ ಒತ್ತಡ ತಡೆದುಕೊಳ್ಳುವ ಶಕ್ತಿ ಲಭಿಸುತ್ತದೆ ಎಂದು ಹೇಳಿದರು.
ವಿಧಾನಪರಿಷತ್ ಸದಸ್ಯ ಅಲ್ಲಂಪ್ರಭು ಪಾಟೀಲ್ ಮಾತನಾಡಿ, ಜಿಲ್ಲೆಯಲ್ಲಿ ಸುಮಾರು 25 ಸಾವಿರ ಸರ್ಕಾರಿ ನೌಕರರಿದ್ದಾರೆ. ಸರ್ಕಾರಿ ನೌಕರರ ಕ್ರೀಡಾಕೂಟ ಏರ್ಪಡಿಸಲು ಸರ್ಕಾರ ಕೇವಲ 25000 ನೀಡುತ್ತಿದೆ. ಇದನ್ನು 1 ಲಕ್ಷಕ್ಕೆ ಹೆಚ್ಚಿಸಲು ಜಿಪಂ ವತಿಯಿಂದ ಕ್ರಮ ಜರುಗಿಸಿದಲ್ಲಿ ಅದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಜಿಲ್ಲೆಯನ್ನು 'ಬಿ' ಜಿಲ್ಲೆಯನ್ನಾಗಿಸಲು ಕ್ರಮ ಜರುಗಿಸಲಾಗುವುದು ಎಂದರು.
ಜಿಪಂ ಅಧ್ಯಕ್ಷ ರಮೇಶ ಮರಗೋಳ ಮಾತನಾಡಿ, ಜಿಲ್ಲೆಯಲ್ಲಿ ಕ್ರೀಡೆಗಳಿಗೆ ಹೆಚ್ಚಿನ ಒತ್ತು ನೀಡಿ ಕ್ರೀಡಾಪಟುಗಳು ಒಲಿಂಪಿಕ್ ಪಂದ್ಯಗಳಲ್ಲಿ ಭಾಗವಹಿಸಿ ಪದಕಗಳನ್ನು ಜಯಿಸುವಂತಾಗಬೇಕೆಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗುಲ್ಬರ್ಗ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೆಯ ಪಾಟೀಲ್ ರೇವುರ ಕ್ರೀಡಾ ಜ್ಯೋತಿ ಸ್ವೀಕರಿಸಿದರು. ಜಿಪಂ ಉಪಾಧ್ಯಕ್ಷೆ ಅನಿತಾ ಪವನಕುಮಾರ್ ವಳಕೇರಿ, ಜಯಶ್ರೀ ಅಶೋಕ ಸಾವಳೇಶ್ವರ, ರಾಜು ಲೇಂಗಟಿ, ಕೆ.ಈರಣ್ಣಗೌಡ ಪಾಲ್ಗೊಂಡಿದ್ದರು.