ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಚುನಾವಣೆ ಸಿದ್ಧತೆ ಪರಿಶೀಲನೆ

Rashmi Kasaragodu
Updated On : 8 Apr 2014, 11:48 am

ಕನ್ನಡಪ್ರಭ ವಾರ್ತೆ  ಯಾದಗಿರಿ  ಏ.7
ಲೋಕಸಭಾ ಚುನಾವಣೆಗಳು ಮುಕ್ತ , ನ್ಯಾಯಸಮ್ಮತವಾಗಿ ನಡೆಸಲು ಬೇಕಾದ ಸಕಲ ಸೌಲಭ್ಯಗಳನ್ನು ಕಲ್ಪಿಸಿ ಅವಶ್ಯಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ್ ರಾಯಚೂರು ಲೋಕಸಭಾ ಚುನಾವಣಾ ವೀಕ್ಷಕ ರಾಜೀವ ಶಂಕರ್ ಅವರಿಗೆ ಮಾಹಿತಿ ನೀಡಿದರು.
 ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಚುನಾವಣಾ ವೀಕ್ಷಕರಿಗೆ ಈಗಾಗಲೇ 7ಕ್ಕೂ ಹೆಚ್ಚು ತಂಡಗಳನ್ನು ರಚಿಸಿ ಚುನಾವಣಾ ಕಾರ್ಯದಲ್ಲಿ ತೊಡಗಿಸಿದೆ. ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಸಂಬಂಧಪಟ್ಟಂತೆ ಕಾರ್ಯಾಚರಣೆ ನಡೆಸಿ 29ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ವಿವಿಧ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ಸೌಲಭ್ಯ: ಅದರಂತೆ ಮತದಾನ ಕೇಂದ್ರಗಳಿಗೆ ನಿಯೋಜಿಸಿದ ಸಿಬ್ಬಂದಿಗೆ ಅವಶ್ಯಕ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಪ್ರಾಥಮಿಕ ಸೌಲಭ್ಯಗಳನ್ನು ಮತದಾನ ಕೇಂದ್ರಗಳಿಗೆ ಪೂರೈಸಲು ಅವಶ್ಯಕ ಕ್ರಮ ಕೈಗೊಂಡಿದೆ. ಅದರಂತೆ ಸಿಬ್ಬಂದಿಗೆ ವಾಹನ ಸೌಲಭ್ಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಕ್ಲಸ್ಟರ್ ಮಾಡಿ ಅವಶ್ಯಕ ಔಷಧಿಗಳ ಸೌಲಭ್ಯ ಕಲ್ಪಿಸಿದೆ. ವಿವಿಧ ತರಬೇತಿ, ಮಸ್ಟರಿಂಗ್, ಡಿ ಮಸ್ಟರಿಂಗ್ ಮತ್ತು ಮತದಾನ ದಿನದ ಸಂದರ್ಭದಲ್ಲಿ ಕುಡಿಯುವ ನೀರು, ಉಪಹಾರದ ವ್ಯವಸ್ಥೆ ಮಾಡಲಾಗಿದೆ.
  ಅದೇ ರೀತಿ ಅವಶ್ಯಕತೆ ಇರುವ ಕಡೆ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ತೀವ್ರ ನಿಗಾವನ್ನು ಜಿಲ್ಲಾ ಪೋಲಿಸ್ ಇಲಾಖೆ ಮತ್ತು ಅಬಕಾರಿ ಇಲಾಖೆಗಳಿಂದ ಮಾಡಲಾಗಿದೆ. ಅದೇ ರೀತಿ ಪತ್ರಿಕೆಗಳು ಹಾಗೂ ವಿದ್ಯುನ್ಮಾನ ಮಾಧ್ಯಮಗಳ ಮೂಲಕ ಪ್ರಸಾರವಾಗುವ ಜಾಹೀರಾತು ಮತ್ತು ಕಾಸಿಗಾಗಿ ಸುದ್ದಿಗಳ ಮೇಲೆ ನಿಗಾ ಇಡಲು ಜಿಲ್ಲಾ ಮಾಧ್ಯಮ ದೃಢೀಕರಣ ಹಾಗೂ ಕಣ್ಗಾವಲು ಸಮಿತಿ ಕಾರ್ಯರೂಪಕ್ಕೆ ತಂದು ತೀವ್ರ ನಿಗಾ ಇಡಲಾಗಿದೆ ಎಂದು ಜಿಲ್ಲಾಧಿಕಾರಿ ಚುನಾವಣಾ ವೀಕ್ಷಕರಿಗೆ ಮಾಹಿತಿ ಒದಗಿಸಿದರು.
ಮುಂಜಾಗ್ರತಾ ಕ್ರಮ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ವಂಶಿಕೃಷ್ಣ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
  ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನ್‌ಕರ್ ಉಪಸ್ಥಿತರಿದ್ದು, ಚುನಾವಣಾ ವೀಕ್ಷಕರಿಗೆ ಲೈಜನ್ ಅಧಿಕಾರಿಯಾಗಿ ಸಿಂಧನೂರ ಕೃಷಿ ಇಲಾಖೆ ಸಹಾಯಕ ನಿರ್ದೇಶಕರನ್ನು ನೇಮಿಸಲಾಗಿದೆ ಎಂದು ತಿಳಿಸಲಾಯಿತು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement