ಸಿಇಟಿ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ
ಗುಲ್ಬರ್ಗ: ಎಂಜಿನಿಯರಿಂಗ್ ಮತ್ತು ವೈದ್ಯಕೀಯ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ 2014ರ ಮೇ 1 ಮತ್ತು 2 ರಂದು ಸಾಮಾನ್ಯ ಪ್ರವೇಶ ಪರೀಕ್ಷೆಗಳು ಜರುಗಲಿವೆ. ಈ ಪರೀಕ್ಷೆಗಳಲ್ಲಿ ಅಕ್ರಮ ಮತ್ತು ನಕಲು ಅವ್ಯವಹಾರ ತಡೆಯಲು ಹಾಗೂ ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಅನುವಾಗುವಂತೆ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ ಸುತ್ತಮುತ್ತಲ ಪ್ರದೇಶದಲ್ಲಿ ಕಲಂ 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಡಾ. ಎನ್. ವಿ. ಪ್ರಸಾದ್ ಆದೇಶ ಹೊರಡಿಸಿದ್ದಾರೆ.
ಕೆಇಎ ನಿಯಮಾವಳಿಗಳ ಪ್ರಕಾರ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮೊಬೈಲ್, ಪೇಜರ್, ಬ್ಲೂಟೂತ್, ವೈರಲೆಸ್ ಸೆಟ್, ಕ್ಯಾಲ್ಕ್ಯೂಲೇಟರ್, ವಾಚ್ ಕ್ಯಾಲ್ಕ್ಯೂಲೇಟರ್, ನಕಲು ಚೀಟಿ, ಲಾಗ್ ಪುಸ್ತಕ, ಪಠ್ಯಪುಸ್ತಕ, ಮಾರ್ಕರ್, ನಕಲಿಗೆ ಸಹಕಾರಿಯಾಗುವ ಯಾವುದೇ ವಸ್ತುಗಳನ್ನು ತರಕೂಡದೆಂದು ಪದವಿಪೂರ್ವ ಹಾಗೂ ವೃತ್ತಿ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್. ಎಂ. ಸಾಳುಂಕೆ ಎಚ್ಚರಿಸಿದ್ದಾರೆ.
ಸಾಮಾನ್ಯ ಪ್ರವೇಶ ಪರೀಕ್ಷೆಗಳಿಗಾಗಿ ಗುಲ್ಬರ್ಗ ಜಿಲ್ಲೆಯಲ್ಲಿ ಒಟ್ಟು 14 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 5,984 ವಿದ್ಯಾರ್ಥಿಗಳು ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯಲಿದ್ದಾರೆ.