ಅಭಿವೃದ್ಧಿ ಕಾರ್ಯ ಸ್ಥಗಿತ: ಆರೋಪ
ಯಾದಗಿರಿ: ರಾಜ್ಯ ಸರ್ಕಾದ ಆಡಳಿತ ನಡೆಸುವಲ್ಲಿ ವಿಫಲವಾಗಿದ್ದು, ಜಿಲ್ಲೆಗೆ ಅನುದಾನ ನೀಡುವಲ್ಲಿ ಹಿಂದೇಟು ಹಾಕಿದ್ದರಿಂದ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ ಎಂದು ಜಿಪಂ ಸದಸ್ಯ ಮತ್ತು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ದೇವರಾಜ ನಾಯಕ್ ಆರೋಪಿಸಿದ್ದಾರೆ.
ಜಿಪಂ ಸಭಾಂಗಣದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಗಾವಣೆಯಾಗಿ ತಿಂಗಳು ಕಳೆದರೂ, ಖಾಲಿ ಹುದ್ದೆಗೆ ಮತ್ತೊಬ್ಬ ಅಧಿಕಾರಿ ನೇಮಿಸದಿರುವುದು ಹಾಗೂ ಜಿಪಂ ಮುಖ್ಯ ಯೋಜನಾಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ 26 ಅಧಿಕಾರಿಗಳ ಹುದ್ದೆ ಖಾಲಿ ಉಳಿದ ಕಾರಣ ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಭಿವೃದ್ಧಿ ಕಾರ್ಯ ಸ್ಥಗಿತ: ಅನೇಕ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿವೆ. ಜಿಲ್ಲಾ ಕೇಂದ್ರದಲ್ಲಿ ಉಸ್ತುವಾರಿ ಸಚಿವರ ಕಚೇರಿಯಿಲ್ಲ. ಅಲ್ಲದೆ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಜಿಲ್ಲಾ ಕ್ರೀಡಾಂಗಣ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಉದ್ಯೋಗ ಖಾತ್ರಿ ಯೋಜನೆಯ ಹಣ ಬಿಡುಗಡೆ ಮಾಡದ ಕಾರಣ ಕೂಲಿ ಕಾರ್ಮಿಕರು ಉದ್ಯೋಗ ಅರಸಿ ಗುಳೆ ಹೋಗುವಂತಾಗಿದೆ ಎಂದು ಆರೋಪಿಸಿದರು.
ಜಿಪಂ ಪ್ರತಿಪಕ್ಷದ ನಾಯಕ ಬಸವರಾಜ ಖಂಡ್ರೆ, ಜಿಲ್ಲೆಯ ಸರ್ಕಾರಿ ಶಾಲೆಗಳಿಗೆ ವಿತರಿಸುವ ಡೆಸ್ಕ್ಗಳ ಖರೀದಿಯಲ್ಲಿ ಎಸ್ಡಿಎಂಸಿ ಅಧ್ಯಕ್ಷರು, ಮುಖ್ಯಗುರುಗಳು ಸೇರಿ ಸಾಕಷ್ಟು ಅವ್ಯವಹಾರ ನಡೆಸಿದೆ ಎಂದು ತಿಳಿಸಿದರು.