ಗುಣಮಟ್ಟದ ಶಿಕ್ಷಣಕ್ಕೆ ಶಾಸಕ ವೆಂಕಟಪ್ಪ ನಾಯಕ್ ಒತ್ತಾಸೆ
ಸುರಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಣಕ್ಕಾಗಿ ಪ್ರತಿ ವರ್ಷ ಕೋಟ್ಯಂತರ ರೂ.ಗಳ ಅನುದಾನ ನೀಡುತ್ತಿವೆ. ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಶಿಕ್ಷಕರು ಮತ್ತು ಉಪನ್ಯಾಸಕರು ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಶಾಸಕ ರಾಜಾ ವೆಂಕಟಪ್ಪನಾಯಕ ಕರೆ ನೀಡಿದರು.
ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಿದ್ದ ಶಾಲಾ ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಬಾಲಕಿಯರಿಗೆ ಪ್ರೌಢ ಶಿಕ್ಷಣ ಒದಗಿಸುವ ಉದ್ದೇಶದಿಂದ ನಮ್ಮ ತಂದೆಯವರು 1966ರಲ್ಲಿ ಈ ಪ್ರೌಢ ಶಾಲೆಯನ್ನು ಮಂಜೂರು ಮಾಡಿಸಿದ್ದಾರೆ. ಬೆರಳಣಿಕೆ ವಿದ್ಯಾರ್ಥಿಗಳೊಂದಿಗೆ ಆರಂಭವಾದ ಈ ಶಾಲೆ ಇಂದು 700ಕ್ಕೂ ಅಧಿಕ ವಿದ್ಯಾರ್ಥಿನಿಯರನ್ನೊಳಗೊಂಡು ಬೃಹದಾಕಾರವಾಗಿ ಬೆಳೆದಿರುವುದು ಸಂತಸದ ಸಂಗತಿ ಎಂದರು. ಶಾಲಾ ಕೋಣೆಗಳ ದುರಸ್ತಿ, ಕಂಪ್ಯೂಟರ್ ಪೂರೈಕೆ, ಶಿಕ್ಷಕರ ಕೊರತೆ ಸೇರಿದಂತೆ ಇನ್ನಿತರ ಸಮಸ್ಯೆಗಳಿಗೆ ತಾವು ಕೂಡಲೇ ಸ್ಪಂದಿಸುವುದಾಗಿ ಶಾಸಕರು ಭರವಸೆ ನೀಡಿದರು. ಪ್ರಾಚಾರ್ಯ ಎನ್.ಸಿ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ತಾಪಂ ಅಧ್ಯಕ್ಷ ಶ್ರೀನಿವಾಸಗೌಡ ಪಾಟೀಲ, ಪುರಸಭೆ ಅಧ್ಯಕ್ಷ ದೇವಿಂದ್ರ ಕಳ್ಳಿಮನಿ, ಪ್ರಮುಖರಾದ ಸೂಲಪ್ಪ ಕಮತಗಿ ಮುಂತಾದವರು ವೇದಿಕೆಯಲ್ಲಿದ್ದರು. ಇದೇ ಸಂದರ್ಭದಲ್ಲಿ ವಿಜ್ಞಾನ ಸ್ಪರ್ಧೆಯಲ್ಲಿ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿ ಪಡೆದ ಪವಿತ್ರಾ, ಅಕ್ಷತಾ ಸೇರಿದಂತೆ ಅನೇಕ ವಿದ್ಯಾರ್ಥಿಗಳನ್ನು ಶಾಸಕರು ಸನ್ಮಾನಿಸಲಾಯಿತು.