'ಅರಿವು ಕಾರ್ಯ ಪ್ರಶಂಸನೀಯ'
ಯಾದಗಿರಿ: ಕಾನೂನು ಸಾಕ್ಷರತಾ ರಥದ ಮೂಲಕ ಗ್ರಾಮಾಂತರ ಪ್ರದೇಶದ ಮನೆಮನೆಯಲ್ಲೂ ಕಾನೂನಿನ ಅರಿವು ಮೂಡಿಸುವ ಕಾರ್ಯ ನಡೆಯುತ್ತಿರುವದು ಪ್ರಶಂಸನೀಯ ಎಂದು ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ್ ಹೇಳಿದ್ದಾರೆ.
ಅವರು ಗುರುವಾರ ಕಾನೂನು ಸಾಕ್ಷರತಾ ರಥ ಹಾಗೂ ಸಂಚಾರಿ ಜನತಾ ನ್ಯಾಯಾಲಯದ ಅಭಿಯಾನ ಕಾರ್ಯಕ್ರಮವನ್ನು ದೀಪ ಬೆಳಗಿಸಿ, ಕಾನೂನು ಸಾಕ್ಷರತಾ ರಥಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಗ್ರಾಮಾಂತರ ಪ್ರದೇಶದ ಬಡ ಜನರು ಹಾಗೂ ರೈತರ ಅನುಕೂಲಕ್ಕಾಗಿ ಅವರ ಮನೆ ಬಾಗಿಲಿಗೆ ತೆರಳಿ ಕಾನೂನಿನ ಅರಿವನ್ನು ಮೂಡಿಸಲಾಗುತ್ತಿದೆ. ಕಾನೂನಿನ ಅರಿವು ಪಡೆಯುವ ಜತೆಗೆ ಕಾನೂನಿನ ನೆರವಿನಿಂದ ತಮ್ಮ ಸಮಸ್ಯೆಗಳನ್ನು ಇತ್ಯರ್ಥ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಕಾನೂನು ಸಾಕ್ಷರತಾ ರಥ ಹಾಗೂ ಸಂಚಾರಿ ಜನತಾ ನ್ಯಾಯಾಲಯದ ಅಭಿಯಾನವನ್ನು ಹಮ್ಮಿಕೊಂಡಿರುವುದು ಜನ ಸಾಮಾನ್ಯರಿಗೆ ಹೆಚ್ಚು ಸಹಕಾರಿಯಾಗಿದೆ. ಇಂತಹ ಕಾರ್ಯಕ್ರಮಗಳಿಂದ ಜನರಲ್ಲಿ ಕಾನೂನಿನ ಬಗ್ಗೆ ಹೆಚ್ಚಿನ ಅರಿವು ಮೂಡಲು ಸಹಕಾರಿಯಾಗುತ್ತದೆ. ಕಾನೂನು ಉಲ್ಲಂಘನೆಯಂತಹ ಪ್ರಕರಣಗಳು ಕಡಿಮೆಯಾಗಲು ಸಹ ನೆರವಾಗುತ್ತದೆ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಧಾನ ಜಿಲ್ಲಾ ಮತ್ತು ಸೇಷನ್ ನ್ಯಾಯಾಧೀಶರಾದ ವಿದ್ಯಾವತಿ ಎಸ್. ಅಕ್ಕಿ ಅವರು ಕಾನೂನು ಸೇವಾ ಪ್ರಾಧಿಕಾರದಿಂದ 9 ದಿನಗಳ ಕಾಲ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಕಾನೂನಿನ ಅರಿವು ಮೂಡಿಸುವ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಜಿಲ್ಲೆಯಲ್ಲಿ ಅತ್ಯಂತ ಹಿಂದುಳಿದ ಮತ್ತು ಬಡ ಜನರು ಇರುವ ಹಿನ್ನಲೆಯಲ್ಲಿ ಅವರಿಗೆ ಕಾನೂನಿನ ಅರಿವಿನ ಕೊರತೆಯಿದೆ. ಇದಕ್ಕಾಗಿ ಇಂತಹ ಮಹತ್ವದ ಕಾರ್ಯಕ್ರಮವು ಜನಸಾಮಾನ್ಯರಿಗೆ ಹೆಚ್ಚು ಸಹಕಾರಿಯಾಗಲಿದೆ ಎಂದು ಹೇಳಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವೆಂಕಟೇಶ ಡಿ. ಕೊಲ್ಲೂರು, ಹಿರಿಯ ದರ್ಜೆ ಸಿವಿಲ್ ನ್ಯಾಯಾಧೀಶ ಕಾರಬಾರಿ ರವೀಂದ್ರ ಇದ್ದರು.