'ಓದಿನ ಜೊತೆಗೆ ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಿ'
ಕೆಂಭಾವಿ: ವಿದ್ಯಾರ್ಥಿಗಳು ಓದಿನ ಜೊತೆಗೆ ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಂಡು ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಭೌತಿಕ ಗುಣಮಟ್ಟ ಹೆಚ್ಚುತ್ತದೆ ಎಂದು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಂಜೀವರಾವ ಕುಲಕರ್ಣಿ ಹೇಳಿದರು.
ಪಟ್ಟಣದ ನವೋದಯ ಶಿಕ್ಷಣ ಸಂಸ್ಥೆಯ ವಿದ್ಯಾಲಕ್ಷ್ಮಿ ಪಬ್ಲಿಕ್ ಶಾಲೆಯಲ್ಲಿ ಇತ್ತೀಚೆಗೆ ಹೊಸ ವರ್ಷದ ಸಂದರ್ಭದಲ್ಲಿ ಆಯೋಜಿಸಿದ್ದ ಪಾರಿತೋಷಕ ವಿತರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ. ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವಲ್ಲಿ ಸಂಸ್ಥೆಗಳು ಶ್ರಮಿಸುತ್ತಿವೆ ಎಂದು ಹೇಳಿದರು.
ವಿಜ್ಞಾನ ಪ್ರತಿಭಾ ಹಾಗೂ ಗಣಿತ ಪರೀಕ್ಷೆಯಲ್ಲಿ ರಾಷ್ಟ್ರ, ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಪದಕ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಸಿಆರ್ಸಿ ಶ್ರೀಶೈಲ ಪಾಸೋಡಿ, ಸಂಸ್ಥೆಯ ಅಧ್ಯಕ್ಷ ಎಸ್. ರಾಮು, ಮುಖ್ಯಗುರು ಎಸ್. ನಾಗವೇಣಿ ಇದ್ದರು. ಪಟೇವ್ ಮುದನೂರ ನಿರೂಪಿಸಿದರು. ರವಿ ಜೋಸೆಫ್ ವಂದಿಸಿದರು.
--