ಪ್ರತಿಭೆ ಗುರುತಿಸುವಲ್ಲಿ ಶಿಕ್ಷಕರ ಪಾತ್ರ ಮುಖ್ಯ: ಬಸಮ್ಮ ಯಾದವ್
ಕ.ಪ್ರ. ವಾರ್ತೆ ಲಿಂಗಸ್ಗೂರು ಜ.21
ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಜೊತೆಗೆ ಅವರಲ್ಲಿನ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ ಎಂದು ತಾಪಂ ಅಧ್ಯಕ್ಷೆ ಬಸಮ್ಮ ಪರಮೇಶ ಯಾದವ್ ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ ಶಾಸಕರ ಸರಕಾರಿ ಮಾದರಿ ಶಾಲೆಯಲ್ಲಿ ಜಿಲ್ಲಾಡಳಿತ, ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಸೋಮವಾರ ನಡೆದ 2013-14ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಪ್ರತಿಭೆ ಇರುತ್ತದೆ. ಪಾಲಕರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಗುರುತಿಸಿ ಇಂತಹ ಕಾರ್ಯಕ್ರಮದಲ್ಲಿ ಸ್ಪರ್ಧಿಸಲು ಅನುಕೂಲ ಕಲ್ಪಿಸಿದರೆ ಪ್ರತಿಭೆ ಹೊರ ಹೊಮ್ಮಲು ಸಾಧ್ಯವಾಗಲಿದೆ.
ವಿವಿಧ ಸೌಕರ್ಯ: ಸರ್ಕಾರ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಬಿಸಿಯೂಟ, ಸಮವಸ್ತ್ರ, ಪಠ್ಯಪುಸ್ತಕ, ಸೈಕಲ್ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ವಿದ್ಯಾರ್ಥಿಗಳನ್ನು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡೆದುಕೊಂಡು ಶಿಕ್ಷಣ, ಕ್ರೀಡೆ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಯಶಸ್ವಿಯಾಗಬೇಕೆಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷ ಕುಮಾರಸ್ವಾಮಿ ಸಾಲ್ಮನಿ, ಎಪಿಎಂಸಿ ಅಧ್ಯಕ್ಷ ಚನ್ನವೀರಪ್ಪಗೌಡ ಪಾಗದ್, ಕ್ಷೇತ್ರ ಶಿಕ್ಷಣಾಧಿಕಾರಿ ಶಾಂತಗೌಡ ಪಾಟೀಲ್, ಪುರಸಭೆ ಸದಸ್ಯ ಎಂ.ಡಿ. ರಫೀ, ಶಿಕ್ಷಕರ ಸಂಘದ ಅಧ್ಯಕ್ಷ ಶಿವಯೋಗಪ್ಪ, ಎಸ್‌ಡಿಎಂಸಿ ಅಧ್ಯಕ್ಷ ಜಯಪ್ರಕಾಶ ಪಾಟೀಲ್, ಶಿಕ್ಷಣ ಇಲಾಖೆಯ ಈಶ್ವರಪ್ಪ ನೀರಡಗಿ, ಹನುಮಂತಪ್ಪ, ತಿಮ್ಮನಗೌಡ, ಡಯಟ್ ಅಧಿಕಾರಿ ರಾಮಚಂದ್ರಪ್ಪ, ಶಿಕ್ಷಕ ಹಾಜಿಮಲಂಗ ಬಾಬಾ ಇದ್ದರು.