ಹಾಸ್ಟೆಲ್ಗಳಿಗೆ ಮೂಲ ಸೌಕರ್ಯಕ್ಕೆ ಒತ್ತಾಯಿಸಿ ಮನವಿ
ಶಹಾಪುರ: ತಾಲೂಕಿನ ಹಿಂದುಳಿದ ವರ್ಗಗಳ ಮತ್ತು ಸಮಾಜ ಕಲ್ಯಾಣ ಇಲಾಖೆಗಳಿಂದ ಹಾಗೂ ಖಾಸಗಿ ಸಂಸ್ಥೆಗಳಿಂದ ನಡೆಯುತ್ತಿರುವ ವಿದ್ಯಾರ್ಥಿ ವಸತಿ ನಿಲಯಗಳಿಗೆ ಮೂಲ ಸೌಕರ್ಯ ಒದಗಿಸಬೇಕೆಂದು ಒತ್ತಾಯಿಸಿ ತಾ. ದಸಂಸ ಕಾರ್ಯಕರ್ತರು ಪ್ರತಿಭಟನಾ ಧರಣಿ ನಡೆಸಿ ತಹಸೀಲ್ದಾರ್ ಮೂಲಕ ಸಮಾಜ ಕಲ್ಯಾಣ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ತಾಲೂಕಿನಲ್ಲಿರುವ ಸರ್ಕಾರಿ ಮತ್ತು ಖಾಸಗಿ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಪಠ್ಯಪುಸ್ತಕ, ಸಮವಸ್ತ್ರ ಹಾಗೂ ಶಿಷ್ಯವೇತನವನ್ನು ವಿತರಿಸಬೇಕು. ಉತ್ತಮ ಗುಣಮಟ್ಟದ ಆಹಾರ ನೀಡಬೇಕು. ವಿದ್ಯಾರ್ಥಿಗಳಿಗೆ ಕಳೆದ ಎರಡು ವರ್ಷದಿಂದ ಸಮವಸ್ತ್ರ ವಿತರಿಸಿಲ್ಲ. ಕೂಡಲೇ ವಿತರಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ನಾಗಣ್ಣ ಬಡಿಗೇರ, ರಾಜ್ಯ ಸಮಿತಿ ಸದಸ್ಯ ದೇವೇಂದ್ರ ಶರ್ಮಾ, ಜಿಲ್ಲಾ ಸಂಚಾಲಕ ರಾಮಣ್ಣ ಕಲ್ಲದೇವನಹಳ್ಳಿ, ರಾಜು ಅಣಬಿ, ಸಿದ್ದಪ್ಪ ಬೇವಿನಹಳ್ಳಿ, ಮರಳಸಿದ್ದ ನಾಯ್ಕಲ್, ಮಲ್ಲೇಶಿ ಜೇವರ್ಗಿಕರ, ಶರಣು ಆಕಾರ, ನಾರಾಯಣ ದೋರನಳ್ಳಿ, ಮರಿಲಿಂಗಪ್ಪ ಭಂಡಾರಿ, ಅಶೋಕ ನಾಯ್ಕಲ್ ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡಿದ್ದರು.