ವೈದ್ಯ ಹುದ್ದೆ ಭರ್ತಿಗಾಗಿ ಮನವಿ
ಯಾದಗಿರಿ: ಜಿಲ್ಲೆಯಲ್ಲಿ ಕಳೆದ 4 ವರ್ಷದಿಂದ ಜಿಲ್ಲಾಸ್ಪತ್ರೆಯಲ್ಲಿ ಮೂಲಸೌಕರ್ಯಗಳ ಅಭಾವ ಸಾಕಷ್ಟಿದೆ. ನುರಿತ ವೈದ್ಯರ ಹುದ್ದೆಗಳು ಭರ್ತಿಗಾಗಿ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸ್ವಾಭಿಮಾನ ಕನ್ನಡ ಸೇನೆ ಆರೋಗ್ಯ ಸಚಿವ ಯು.ಟಿ ಖಾದರ್ ಅವರಿಗೆ ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಈ ಸಂದರ್ಭದಲ್ಲಿ ಸಂಘಟನೆ ರಾಜ್ಯಾಧ್ಯಕ್ಷ ಭೀಮಾಶಂಕರ ಆಲ್ದಾಳ ಮಾತನಾಡಿ, ಜಿಲ್ಲಾಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಗ್ರಾಮೀಣ ಭಾಗದ ಜನತೆ ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವಂತಾಗಿದೆ. ಹೀಗಾಗಿ ಖಾಲಿ ಇರುವ ವೈದ್ಯರ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಜಿಲ್ಲಾಸ್ಪತ್ರೆಯಲ್ಲಿನ ಎಕ್ಸ್ರೇ, ವಿಭಾಗ, ಸ್ಕಾನಿಂಗ್ ಘಟಕದಲ್ಲಿನ ಯಂತ್ರಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿದ್ದು, ಕೂಡಲೆ ಈ ಬಗ್ಗೆ ಕ್ರಮ ಕೈಗೊಳ್ಳುವ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಆನಂದ ಗೋಡಿಹಾಳ, ಖಾಜಾ ಬಂದೇನವಾಜ ಸೇರಿದಂತೆ ಇನ್ನಿತರರು ಇದ್ದರು.