ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಬಡವರ ಆರೋಗ್ಯ ಸೇವೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಚಿವ ಖರ್ಗೆ

Mainashree
Updated On : 5 Mar 2014, 10:53 am

ಗುಲ್ಬರ್ಗ: ರಾಜ್ಯದ ಕಡುಬಡವರಿಗೆ, ಮಧ್ಯಮ ವರ್ಗದ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಕಲ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಸರ್ಕಾರಿ ಆಸ್ಪತ್ರೆ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಪ್ರಾರಂಬಿಸಲಾಗುತ್ತಿದೆ ಎಂದು ರೇಲ್ವೆ ಮತ್ತು ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಖಾತೆ ಸಚಿವ ಡಾ. ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ನಗರದಲ್ಲಿ ಮಂಗಳವಾರ ನೂತನ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಂಡಿದ್ದ ಗುಲ್ಬರ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕಟ್ಟಡಗಳಿಗೆ ಶಂಕುಸ್ಥಾಪನೆ, ಹೊಸ 500 ಹಾಸಿಗೆವುಳ್ಳ ಜಿಲ್ಲಾ ಆಸ್ಪತ್ರೆ ಮತ್ತು ನರ್ಸಿಂಗ್ ಕಾಲೇಜು ಉದ್ಘಾಟಿಸಿ ಅವರು ಮಾತನಾಡಿದರು.
ಕೇಂದ್ರದ ಪ್ರೋತ್ಸಾಹ: ದೇಶದಲ್ಲಿ ಹಾಗೂ ರಾಜ್ಯದಲ್ಲಿರುವ ವೈದ್ಯರ ಕೊರತೆಯನ್ನು ನೀಗಿಸಿ ಜನರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭಿಸಿ, ಕಡುಬಡವ ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟುಗಳನ್ನು ಹೆಚ್ಚಿಸುವ ಮೂಲಕ ಹಾಗೂ ಹೆಚ್ಚಿನ ಹುದ್ದೆಗಳನ್ನು ಸೃಷ್ಟಿಸುವುದಕ್ಕೆ ಒತ್ತು ನೀಡಿ ರಾಜ್ಯ ಸರ್ಕಾರಗಳಿಗೆ ಪ್ರೋತ್ಸಾಹಿಸಲಾಗುತ್ತಿದೆ ಎಂದರು.
ಕೇಂದ್ರ ಸರ್ಕಾರವು ರಾಜ್ಯದ ಕ್ಯಾನ್ಸರ್ ಆಸ್ಪತ್ರೆಗಳನ್ನು ಬಲಗೊಳಿಸಲು ಸಿದ್ಧವಾಗಿದೆ. ರಾಜ್ಯದ ಕ್ಯಾನ್ಸರ್ ಆಸ್ಪತ್ರೆಗೆ 120 ಕೋಟಿ, ಗುಲ್ಬರ್ಗ ಹಾಗೂ ಮಂಡ್ಯ ಕ್ಯಾನ್ಸರ್ ಆಸ್ಪತ್ರೆಗಳಿಗೆ ತಲಾ 47 ಕೋಟಿ ನೀಡಿದೆ. ಬಳ್ಳಾರಿ ಮತ್ತು ಹುಬ್ಬಳ್ಳಿಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಪ್ರಾರಂಭಿಸಲು ತಲಾ 150 ಕೋಟಿ ಮಂಜೂರು ಮಾಡಿದೆ. ಹುಬ್ಬಳ್ಳಿಯಲ್ಲಿ 75 ಕೋಟಿ ವೆಚ್ಚದಲ್ಲಿ ಕಾರ್ಮಿಕ ಇಲಾಖೆಯ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.
ಹುಬ್ಬಳ್ಳಿ, ಬಳ್ಳಾರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಮಾತನಾಡಿ, ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಬಳ್ಳಾರಿ ಮತ್ತು ಹುಬ್ಬಳ್ಳಿಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಪ್ರಾರಂಭಿಸಲಾಗುವುದು ಎಂದರು. ಗುಲ್ಬರ್ಗ ಜಿಲ್ಲಾ ಉಸ್ತುವಾರಿ ಸಚಿವ ಖಮರುಲ್ ಇಸ್ಲಾಂ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಎಂಎಲ್ಸಿ ಅಲ್ಲಂಪ್ರಭು ಪಾಟೀಲ, ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ, ಜಿಪಂ ಅಧ್ಯಕ್ಷ ರಮೇಶ ಶಂಕ್ರೆಪ್ಪ ಮರಗೋಳ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement