ಕ್ಷೇತ್ರದ ಅಭಿವೃದ್ಧಿಗೆ 118 ಕೋಟಿ
ಜೇವರ್ಗಿ: ಶಾಸಕರಾಗಿ ಆಯ್ಕೆಯಾದ ನಂತರ ಕಳೆದ 9 ತಿಂಗಳ ಅವಧಿಯಲ್ಲಿ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಸುಮಾರು 118 ಕೋಟಿ ಅಂದಾಜು ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಂಡಿದ್ದು, ಬಹುತೇಕ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಶಾಸಕ ಡಾ. ಅಜಯಸಿಂಗ್ ಹೇಳಿದರು.
ಪಟ್ಟಣದಲ್ಲಿ ಬುಧವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕೇಂದ್ರ- ರಾಜ್ಯ ಸರ್ಕಾರದಿಂದ ತಾಲೂಕಿಗೆ ಬಿಡುಗಡೆಗೊಳಿಸಿದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳವ ಮೂಲಕ ನಿಗದಿತ ಅವಧಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
ಅಭಿವೃದ್ಧಿ ಅನುದಾನ: ಜೇವರ್ಗಿ ಪಪಂ ಮೇಲ್ದರ್ಜೆಗೇರಿಸುವ ಮೂಲಕ ಪುರಸಭೆಯನ್ನಾಗಿ ಮಾಡಲು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ತಾಲೂಕು ಕ್ರೀಡಾಂಗಣ ಸುಧಾರಣೆಗೆ 50 ಲಕ್ಷ, ಡಾ. ಅಂಬೇಡ್ಕರ್ ಭವನ ಕಾಮಗಾರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ 1 ಕೋಟಿ ಅನುದಾನ ಬಿಡುಗಡೆಗೊಳಿಸಲಾಗಿದೆ. 32 ಕೋಟಿ ಅಂದಾಜು ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಗ್ರಾಮೀಣ ರಸ್ತೆಗಳ ನಿರ್ಮಾಣ, ಚಿಕ್ಕಮುದಬಾಳ-ಚಾಮನಾಳ ರಸ್ತೆ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಲೋಕೋಪಯೋಗಿ ಇಲಾಖೆ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು 20 ಕೋಟಿ ಅನುದಾನ ಬಿಡುಗಡೆಗೊಳಿಸಲು ಮುಖ್ಯಮಂತ್ರಿಗೆ ಮನವಿ ಮಾಡಲಾಗುವುದು ಎಂದು ಹೇಳಿದರು.
ಪ್ರಸ್ತಾವನೆ: ದೇಸಣಗಿ- ಜೇರಟಗಿ ರಸ್ತೆ ನಿರ್ಮಾಣಕ್ಕೆ ನಬಾರ್ಡ್ ಯೋಜನೆಯಿಂದ 1 ಕೋಟಿ ಬಿಡುಗಡೆ. 1.40 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಹೈ-ಕ ಅಭಿವೃದ್ಧಿ ಪ್ರಾದೇಶಿಕ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಾಚಾಪುರ ಬಳಿ ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸುತ್ತಿರುವ ಸೇತುವೆಗೆ 5 ಕೋಟಿ, ಮಲ್ಲಾಬಾದ್ ಏತ ನೀರಾವರಿ ಯೋಜನೆ ಕಾಮಗಾರಿಗೆ ರಾಜ್ಯ ಸರ್ಕಾರ 6.25 ಕೋಟಿ ಅನುದಾನ ಬಿಡುಗಡೆಯಾಗಿದೆ. ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ಯಾತನೂರ-ಮೋಗನ ಇಟಗಾ ರಸ್ತೆಗೆ 8.25 ಕೋಟಿ ಅನುದಾನ ಮಂಜೂರಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಎಂಎಲ್ಸಿ ಅಲ್ಲಂಪ್ರಭು ಪಾಟೀಲ್, ಕೆಪಿಸಿಸಿ ಸದಸ್ಯ ಶಾಂತಗೌಡ ದುಮ್ಮದ್ರಿ, ಜಿಪಂ ಸದಸ್ಯ ಗುರುಲಿಂಗಪ್ಪಗೌಡ ಪಾಟೀಲ್ ಆಂದೋಲಾ, ತಾಪಂ ಅಧ್ಯಕ್ಷ ಮಲ್ಲನಗೌಡ ನೇದಲಗಿ ಇದ್ದರು.