ಅನ್ಯಾಯ, ಅತ್ಯಾಚಾರ, ದೌರ್ಜನ್ಯ ತಡೆಗೆ ಕ್ರಮ ಅಗತ್ಯ: ನ್ಯಾ. ವಿದ್ಯಾವತಿ
ಯಾದಗಿರಿ: ಮಹಿಳೆಯರ ಮೇಲೆ ಅವ್ಯಾಹತವಾಗಿ ಅನ್ಯಾಯ, ಅತ್ಯಾಚಾರ, ದೌರ್ಜ್ಜನ್ಯ ನಡೆಯುತ್ತಿದ್ದು, ಇದನ್ನು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕೆಂದು ಜಿಲ್ಲಾ ಸೆಷನ್ಸ್ ನ್ಯಾಯಾಧೀಶರಾದ ವಿದ್ಯಾವತಿ ಎಸ್. ಅಕ್ಕಿ ಅವರು ಹೇಳಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಯಾದಗಿರಿ ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ 'ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಕಾನೂನು ಅರಿವು' ಕಾರ್ಯಾಗಾರವನ್ನು ಉದ್ಫಾಟಿಸಿ ಅವರು ಮಾತನಾಡಿದರು.
ಈ ಜಿಲ್ಲೆ ಶೈಕ್ಷಣಿಕ ಜಿಲ್ಲೆಯಾಗಬೇಕೆಂದರೆ ಮಕ್ಕಳಿಗೆ ಶಿಕ್ಷಣ ದೊರಕಿಸಿಕೊಡಬೇಕು. ನಾವು ಪುರುಷರ ಜತೆಗೆ ಸಮಾನತೆಯನ್ನು ಕಾಯ್ದುಕೊಳ್ಳಬೇಕೆಂದು ಹೇಳಿದರು.
ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ರವೀಂದ್ರ ಕಾರಬಾರಿ ಮಾತನಾಡಿ, ಮಹಿಳೆಯರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದು, ಈ ದೌರ್ಜನ್ಯ ತಡೆಯಲು ಪ್ರಯತ್ನ ಮಾಡಬೇಕು. ಕಳೆದ 10 ವರ್ಷದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗುತ್ತಿದೆ. ಮಹಿಳೆಯರಿಗೆ ಮತ್ತು ಪುರಷರಿಗೆ ಸಮಾನತೆ ಹಕ್ಕು ಇದೆ. ವರದಕ್ಷಿಣೆ ಪದ್ದತಿಯನ್ನು ನಿಷೇಧಿಸಬೇಕೆಂದು ಹೇಳುತ್ತಾರೆ. ಆದರೆ ಅದು ಇನ್ನೂ ಚಾಲನೆಯಲ್ಲಿ ಇದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಲ್ಲಿಕಾರ್ಜುನ ಮುಕ್ಕಾ ಮಾತನಾಡಿದರು.