ಅಭ್ಯರ್ಥಿಗಳ ಖರ್ಚು ವೆಚ್ಚದ ಬಗ್ಗೆ ನಿಗಾಕ್ಕೆ ಸೂಚನೆ
ಯಾದಗಿರಿ: ಲೋಕಸಭಾ ಚುನಾವಣೆಯು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಯಲು ಅನುಕೂಲವಾಗುವಂತೆ ನಿಗದಿಪಡಿಸಿರುವ ವೆಚ್ಚದಂತೆ ಹಣವನ್ನು ಅಭ್ಯರ್ಥಿಗಳು ವೆಚ್ಚ ಮಾಡುತ್ತಿರುವ ಬಗ್ಗೆ ತೀವ್ರ ನಿಗಾ ಇಡಬೇಕೆಂದು ರಾಯಚೂರು ಲೋಕಸಭಾ ಕ್ಷೇತ್ರದ ಚುನಾವಣಾ ವೆಚ್ಚ ವೀಕ್ಷಕ ಬಿಜು ಥಾಮಸ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ವೆಚ್ಚ ಸಂಬಂಧಿ ಸಭೆಯಲ್ಲಿ ಮಾತನಾಡಿದ ಅವರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅತಿ ಹೆಚ್ಚು ಚುನಾವಣಾ ವೆಚ್ಚ ಮಾಡುತ್ತಿರುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದೆ. ಕಾರಣ ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚಗಳ ಬಗ್ಗೆ ತೀವ್ರ ನಿಗಾ ಇಡಬೇಕೆಂದು ಅಧಿಕಾರಿಗಳಿಗೆ ಹೇಳಿದರು.
ಈ ಚುನಾವಣೆಗಾಗಿ ಅಭ್ಯರ್ಥಿಗಳ ವೆಚ್ಚ ಮಾಡುವ ಹಣದ ಮಿತಿಯನ್ನು 70 ಲಕ್ಷ ರೂ.ಗಳಿಗೆ ಏರಿಸಲಾಗಿದೆ. ನಿಗದಿಪಡಿಸಿರುವ ಈ ವೆಚ್ಚದ ಖರ್ಚಿನ ಬಗ್ಗೆ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ದಾಖಲಿಸಿ ಇಟ್ಟುಕೊಂಡು ಕಾಲಕಾಲಕ್ಕೆ ಈ ಕುರಿತು ವರದಿಯನ್ನು ಕಳುಹಿಸಬೇಕು. ಚುನಾವಣೆ ಸಂದರ್ಭದಲ್ಲಿ ಅಕ್ರಮವಾಗಿ ಹಣ ಬಳಕೆ ಮತ್ತು ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಖಾತರಿಪಡಿಸಿಕೊಂಡು, ಈ ಕುರಿತು ಸಾಕ್ಷಿಗಾಗಿ ವಿಡಿಯೊ ರಿಕಾರ್ಡಿಂಗ್ ಮಾಡಿಕೊಂಡು ಪರಿಸ್ಥಿತಿಗೆ ಅನುಗುಣವಾಗಿ ಪ್ರಕರಣಗಳನ್ನು ದಾಖಲಿಸಿಕೊಳ್ಳಬೇಕೆಂದು ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ್ ಅವರು ಮಾತನಾಡಿ, ಈಗಾಗಲೇ ನೇಮಿಸಿರುವ ಸಹಾಯಕ ಚುನಾವಣಾಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ತಂಡಗಳ ಅಧಿಕಾರಿಗಳಿಗೆ ಸೂಕ್ತ ತರಬೇತಿ ಮತ್ತು ಮಾರ್ಗದರ್ಶನ ನೀಡಬೇಕು. ಚುನಾವಣಾ ಅಭ್ಯರ್ಥಿಗೆ ಮತ್ತು ತಾರೆಯರ ಪ್ರಚಾರಕ್ಕಾಗಿ ಚುನಾವಣಾ ಆಯೋಗದಿಂದ ನಿಗದಿಪಡಿಸಿರುವ ವೆಚ್ಚದ ಬಗ್ಗೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದು ತಿಳಿಸಿದರು.
ಬ್ಯಾಂಕುಗಳ ಹಣಕಾಸಿನ ವ್ಯವಹಾರದ ಮೇಲೆ ನಿಗಾ: ವಿವಿಧ ಬ್ಯಾಂಕುಗಳ ಮೂಲಕ ನಡೆಯುತ್ತಿರುವ ಬೃಹತ್ ಪ್ರಮಾಣದ ಹಣಕಾಸಿನ ವ್ಯವಹಾರಗಳ ಬಗ್ಗೆ ತೀವ್ರ ನಿಗಾ ಇಡುವಂತೆ ಮತ್ತು ಈ ಕುರಿತು ವರದಿ ನೀಡುವಂತೆ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಭ್ಯರ್ಥಿಗಳವೆಚ್ಚಗಳ ಬಗ್ಗೆ ಅಧಿಕೃತ ಮಾಹಿತಿ ನಮೂದಿಸಿದಲ್ಲಿ ಚುನಾವಣಾ ಸುಗಮ ಕಾರ್ಯಕ್ಕೆ ಸಹಕಾರಿಯಾಗುತ್ತದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಮತದಾನವಾಗಿರುವ ಸ್ಥಳಗಳನ್ನು ಈಗಾಗಲೇ ಗುರುತಿಸಿದ್ದು, ಅಂತಹ ಸ್ಥಳಗಳಲ್ಲಿ ಮತದಾನ ಪ್ರಮಾಣ ಹೆಚ್ಚಳವಾಗುವಂತೆ ಗಮನಹರಿಸಲು ತಹಸೀಲ್ದಾರರಿಗೆ ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎ. ಜಿಲಾನಿ, ಜಿಲ್ಲಾ ಪೋಲಿಸ್ ವರಿಷ್ಠ ಸಿ. ವಂಶಿಕೃಷ್ಣ, ಹೆಚ್ಚುವರಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಸೇರಿದಂತೆ ಸಹಾಯಕ ಚುನಾವಣಾಧಿಕಾರಿಗಳು ಉಪಸ್ಥಿತರಿದ್ದರು.
ನಾಳೆ ಕಾಂಗ್ರೆಸ್ ಸಭೆ(ಕೆಂಭಾವಿ ವರದಿ): ಮುಂಬರುವ ಲೋಕಸಭಾ ಚುನಾವಣೆ ನಿಮಿತ್ತ ರಾಯಚೂರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಬಿ.ವಿ. ನಾಯಕ ಪರ ಪ್ರಚಾರ ಕೈಗೊಳ್ಳಲು ಮಾ. 22ರಂದು ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಬೃಹತ್ ಸಭೆಯನ್ನು ಏರ್ಪಡಿಸಲಾಗಿದೆ. ಮಾಜಿ ಸಚಿವ ಶರಣಬಸಪ್ಪ ದರ್ಶನಾಪುರ ಹಾಗೂ ಎಲ್ಲ ಜಿಪಂ, ತಾಪಂ, ಎಪಿಎಂಸಿ ಸದಸ್ಯರು, ಗ್ರಾಪಂ ಅಧ್ಯಕ್ಷರು, ಸದಸ್ಯರು ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಲಿಂಗನಗೌಡ ಮಾಲಿಪಾಟೀಲ ತಿಳಿಸಿದ್ದಾರೆ.