ಹೈ.ಕ. ಪ್ರದೇಶದಲ್ಲಿ 'ಕೈ' ಧೂಳೀಪಟ: ಕಲ್ಲೂರ
ಜೇವರ್ಗಿ: ಮುಂಬರುವ ಏ.17ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಕಾಂಗ್ರೆಸ್ ಧೂಳೀಪಟವಾಗಲಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಶಿವಾನಂದ ಕಲ್ಲೂರ ಹೇಳಿದರು.
ಪಟ್ಟಣದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಈಗಾಗಲೇ ರಾಜ್ಯದ 28 ಲೋಕಸಭೆ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ದೇಶದ ಸಮರ್ಥ ನಾಯಕ ನರೇಂದ್ರ ಮೋದಿಯವರನ್ನು ಬೆಂಬಲಿಸಲು ರಾಜ್ಯದ ಮತದಾರರು ನಿರ್ಧರಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ ಎದ್ದು ಕಾಣುತ್ತಿದೆ ಎಂದರು.
ತಾವು ಕಳೆದ ಒಂದು ತಿಂಗಳಲ್ಲಿ ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಬಿಜಾಪುರ, ಗುಲ್ಬರ್ಗ, ಬೀದರ್, ರಾಯಚೂರು, ಬಳ್ಳಾರಿ, ಕೊಪ್ಪಳ ಕ್ಷೇತ್ರಗಳಲ್ಲಿ ಸಂಚರಿಸಿದ್ದು, ಪಕ್ಷದ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಹೈದ್ರಾಬಾದ್ ಕರ್ನಾಟಕ ಹಾಗೂ ಮುಂಬೈ ಕರ್ನಾಟಕದಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಬಹುಮತದಿಂದ ಗೆಲವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜಾತಿ, ಹಣ, ತೋಳ್ಬಲ ನಡೆಯದು: ಪ್ರತಿ ಚುನಾವಣೆಯಲ್ಲಿ ಜಾತಿ ಬಲ, ಹಣ ಬಲ, ತೋಳ್ಬಲಗಳು ಕೆಲಸ ಮಾಡಿದಂತೆ ಈ ಚುನಾವಣೆಯಲ್ಲಿ ಈ ಬಲಗಳು ನಡೆಯುವುದಿಲ್ಲ. ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡಲು ದೇಶದ ಜನತೆ ನಿರ್ಧರಿಸಿದ್ದು, ಯಾವ ಶಕ್ತಿಗಳು ಅವರನ್ನು ತಡೆಯಲು ಸಾಧ್ಯವಿಲ್ಲ. ದೇಶ ಭಕ್ತ ಇದ್ದವರು ಬಿಜೆಪಿ ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯವರನ್ನು ಬೆಂಬಲಿಸಲಿದ್ದಾರೆ. ಕೇಂದ್ರದಲ್ಲಿ ಎನ್‌ಡಿಎ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶ ಮತ್ತಷ್ಟು ಬಲಿಷ್ಠಗೊಳ್ಳಲಿದೆ ಎಂದು ತಿಳಿಸಿದರು.
ಭ್ರಷ್ಟಾಚಾರದಲ್ಲಿ ಮುಳುಗಿದ ಕೇಂದ್ರ ಸರ್ಕಾರ: ಕೇಂದ್ರದಲ್ಲಿ 10 ವರ್ಷ ಅಧಿಕಾರ ನಡೆಸಿದ ಯುಪಿಎ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದ್ದರಿಂದ ಜನತೆ ಭ್ರಮನಿರಸನಗೊಂಡಿದ್ದಾರೆ. ದೇಶದ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ದೇಶದ ಜನತೆ ಎನ್‌ಡಿಎಗೆ ಬೆಂಬಲಿಸಲಿದ್ದಾರೆ. ಗುಲ್ಬರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರೇವುನಾಯಕ ಬೆಳಮಗಿ ಅವರು ಭಾರಿ ಮತಗಳ ಅಂತರದಿಂದ ಗೆಲವು ಸಾಧಿಸಲಿದ್ದಾರೆ ಎಂಬ ವಿಶ್ವಾಸವನ್ನು ಕಲ್ಲೂರ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿಶ ಅಶೋಕ ಅಲ್ಲಾಪುರ, ರಮೇಶಬಾಬು ವಕೀಲ್, ಬಸವರಾಜ ಪಾಟೀಲ್ ನರಿಬೋಳ ಇತರರು ಇದ್ದರು.