ಡಿಸಿ ಕಚೇರಿ ಎದುರು ಶಾಸಕರ ಪ್ರತಿಭಟನೆ ನಾಳೆ
ಆಳಂದ: ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಿಲ್ಲ ಎಂದು ಆರೋಪಿಸಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಮೇ 3ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ಬಿ.ಆರ್. ಪಾಟೀಲ್ ಹೇಳಿದ್ದಾರೆ.
ಬೇಸಿಗೆ ಅರ್ಧ ಅವಧಿ ಮುಗಿಯುತ್ತಾ ಬಂದರೂ ಈ ಕುರಿತು ಅಧಿಕಾರಿಗಳು ಸ್ಪಂದಿಸಿಲ್ಲ. ಒಂದೂ ಬೋರ್‌ವೆಲ್ ಕೊರೆಸಿಲ್ಲ. ಸಮಸ್ಯೆ ನಿವಾರಣೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ಶಾಸಕರು, ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಈ ಕುರಿತು ನಿಷ್ಕ್ರಿಯತೆ ತೋರಿದ್ದಾರೆ ಎಂದು ಹೇಳಿದ್ದಾರೆ.
ಕ್ಷೇತ್ರದಲ್ಲಿ ಅಧಿಕಾರಿಗಳು ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಂಡಿಲ್ಲ. ಚುನಾವಣೆ ನೀತಿ ಸಂಹಿತೆ ಇರುವುದರಿಂದ ಶಾಸಕರುಗಳಿಗೆ ಸಭೆ ಕರೆಯಲು ಆಗುತ್ತಿಲ್ಲ. ಆದರೆ ದಿನ ಕಳೆದಂತೆ ನೀರಿನ ಸಮಸ್ಯೆ ತಲೆ ಹೆಚ್ಚಾಗುತ್ತಿದ್ದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಡಳಿತ ಮತ್ತು ಜಿಲ್ಲಾ ಸಚಿವರ ನಿರ್ಲಕ್ಷ್ಯವನ್ನು ಖಂಡಿಸಿ ಮೇ 3ರಂದು ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ಪಾಟೀಲ್ ತಿಳಿಸಿದ್ದಾರೆ.