ಸುದ್ದಿ ಸಂಕ್ಷೇಪ
ಹಾಸನದಲ್ಲಿ ಗುಡುಗು ಮಿಂಚು ಸಹಿತ ಮಳೆ
ಹಾಸನ: ನಗರದಲ್ಲಿ ಬುಧವಾರ ರಾತ್ರಿ ಭಾರೀ ಗುಡುಗು ಮಿಂಚಿನಿಂದ ಕೂಡಿದ ಧಾರಾಕಾರ ಮಳೆ ಸುರಿಯಿತು. ಇದರಿಂದ ನಗರದಲ್ಲಿ ಕೆಲ ಕಾಲ ಜನಜೀವನ ಅಸ್ತವ್ಯಸ್ತವಾಯಿತು. ಚರಂಡಿಯಲ್ಲಿ ತುಂಬಿದ ನೀರು ರಸ್ತೆಗೆ ಹರಿದಿದ್ದರಿಂದ ವಾಹನಗಳ ಸಂಚಾರಕ್ಕೆ ತೊಡಕುಂಟಾಯಿತು. ಬಿಸಿಲಿನಿಂದ ಬಸವಳಿದಿದ್ದ ಜನರಿಗೆ ಮಳೆಯಿಂದ ತಂಪೆರೆದಂತಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ ಪರಿಣಾಮ ಅಲ್ಲಿನ ನಿವಾಸಿಗಳು ತೀವ್ರ ತೊಂದರೆ ಅನುಭವಿಸುವಂತಾಯಿತು.
ಮತದಾರರ ಜಾಗೃತಿ ವಿಚಾರ ಸಂಕಿರಣ
ಹಾಸನ: ಕ್ಷೇತ್ರ ಪ್ರಚಾರ ನಿರ್ದೇಶನಾಲಯ, ಚುನಾವಣಾ ಆಯೋಗ, ಅನನ್ಯ ಟ್ರಸ್ಟ್ ಆಶ್ರಯದಲ್ಲಿ ಮತದಾರರ ಜಾಗೃತಿ ಕುರಿತ ವಿಚಾರ ಸಂಕಿರಣವನ್ನು ಏ.4 ರಂದು ಸಂಜೆ 4ಕ್ಕೆ ನಗರದ ಚಿಪ್ಪಿನಕಟ್ಟೆಯ ಅಲಮಿನ್ ಉರ್ದು ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಆದಾಯ ತೆರಿಗೆ ಇಲಾಖೆಯ ಉಪ ಆಯುಕ್ತೆ ನಂದಿನಿ ದಾಸ್ ಉದ್ಘಾಟಿಸುವರು. ಮಾಝಿದ್ ಅಧ್ಯಕ್ಷತೆ ವಹಿಸುವರು. ಹಿರಿಯ ಪತ್ರಕರ್ತ ಆರ್.ಪಿ. ವೆಂಕಟೇಶಮೂರ್ತಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಉಪನ್ಯಾಸ ನೀಡುವರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗೀತಾ, ಜಿಲ್ಲಾ ಚುನಾವಣಾ ಮಾಧ್ಯಮ ದೃಢೀಕರಣ ಸಮಿತಿಯ ಸದಸ್ಯ ರಾಮೇಗೌಡ, ಪತ್ರಕರ್ತ ದಯಾಶಂಕರ ಮೈಲಿ, ವೈದ್ಯಾಧಿಕಾರಿ ಡಾ.ಕೆ.ಎಂ.ಸತೀಶ್ ಭಾಗವಹಿಸುವರು.
ಪೆಂಟಾವೆಲೆಂಟ್ ಲಸಿಕೆ ನೀಡುವ ಕಾರ್ಯಕ್ರಮ
ಹಾಸನ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಕ್ಕಳ ಲಸಿಕಾ ಕಾರ್ಯಕ್ರಮದಡಿಯಲ್ಲಿ ಹೊಸದಾಗಿ ಪೆಂಟಾವೆ ಲೆಂಟ್ ಲಸಿಕೆ ನೀಡಲು ಪ್ರಾರಂಭಿಸಲಾಗುತ್ತಿದೆ. ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಏಪ್ರಿಲ್ 4ರಂದು ಬೆಳಗ್ಗೆ 11ಕ್ಕೆ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ಯಾಮಲಾದೇವಿ ತಿಳಿಸಿದ್ದಾರೆ.