ಸ್ಥಳೀಯ ಸಂಸ್ಥೆ ಚುನಾವಣೆ: ಗೆದ್ದವರು- ಸೋತವರಿಗೆ ಸನ್ಮಾನ
ಕನ್ನಡಪ್ರಭ ವಾರ್ತೆ ಹಾಸನ ಏ.9
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷದಿಂದ ಗೆದ್ದ ಹಾಗೂ ಸೋತ ಅಭ್ಯರ್ಥಿಗಳಿಗೆ ಮಂಗಳವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಜಿಲ್ಲಾ ಮುಖಂಡರು ಸಭೆ ಕರೆದು ಅಭ್ಯರ್ಥಿಗಳನ್ನು ಸನ್ಮಾನಿಸಿದರು. ನಂತರದ ಮಾತನಾಡಿದ ಕಾಂಗ್ರೆಸ್ ಮುಖಂಡ ಎಸ್.ಎಂ.ಆನಂದ್, ಚುನಾವಣೆಯಲ್ಲಿ ಸೋಲು ಗೆಲುವು ಸಾಮಾನ್ಯ. ಆದ್ದರಿಂದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎಲ್ಲರೂ ಒಟ್ಟಾಗಿ ದುಡಿಯಬೇಕಾಗಿದೆ. ಪಕ್ಷವನ್ನು ಸಂಘಟಿಸಬೇಕು. ಎಲ್ಲಾ ಕಾರ್ಯಕರ್ತರು ಪ್ರಾಮಾಣಿಕವಾಗಿ ತಮ್ಮ ಕಾರ್ಯವನ್ನು ನಿರ್ವಹಿಸಿ ಪಕ್ಷವನ್ನು ಮತ್ತಷ್ಟು ಬಲ ಪಡಿಸುವ ಕಾರ್ಯವನ್ನು ಮಾಡಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಹೆಚ್ಚು ಸ್ಥಾನಗಳನ್ನು ವಿಧಾನಸಭಾ ಚುನಾವಣೆಯಲ್ಲಿ ಪಡೆಯುವ ಮೂಲಕ ಕಾಂಗ್ರೆಸ್ ಅನ್ನು ಭದ್ರ ಪಡಿಸಬೇಕು. ಇಲ್ಲಿ ಹೆಚ್ಚಿನ ಸ್ಥಾನಗಳನ್ನು ಪಡೆದಲ್ಲಿ ರಾಜ್ಯದಲ್ಲಿ ಅಧಿಕಾರಿ ಹಿಡಿಯುವ ನಮ್ಮ ಪಕ್ಷಕ್ಕೆ ಹೆಚ್ಚು ಬೆಂಬಲ ನೀಡಬೇಕು. ಅಲ್ಲದೆ ಜಿಲ್ಲೆಯವರಿಗೆ ಮಂತ್ರಿ ಸ್ಥಾನ ಸಿಗುವಂತೆ ಮಾಡಬೇಕು. ಆದ್ದರಿಂದ ಎಲ್ಲಾ ಕಾರ್ಯಕರ್ತರು ತಳಮಟ್ಟದಿಂದ ಕಾರ್ಯನಿರ್ವಹಿಸುವ ಮೂಲಕ ಪಕ್ಷಕ್ಕೆ ಹೆಚ್ಚು ಬಲ ತುಂಬಬೇಕು. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ನಾರಾಯಣಗೌಡ, ನಗರಸಭೆ ಸದಸ್ಯ ಯಶ್ವಂತ್ ಹಾಗೂ ಇತರರು ಇದ್ದರು.