ನಾಳೆ ಹಾಸನದಲ್ಲಿ ವಚನ ಸಾಹಿತ್ಯ ಸಮ್ಮೇಳನ
ಹಾಸನ: ಜಿಲ್ಲಾ ವಚನ ಸಾಹಿತ್ಯ ಪರಿಷತ್ ಹಾಗೂ ಬೆಂಗಳೂರಿನ ಜ್ಞಾನ ಮಂದಾರ ಅಕಾಡೆಮಿ ಸಂಯುಕ್ತಾಶ್ರಯದಲ್ಲಿ ಅಖಿಲ ಕರ್ನಾಟಕ ಪ್ರಪ್ರಥಮ ವಚನ ಸಾಹಿತ್ಯ ಸಮ್ಮೇಳನ ಏ.20 ರಂದು ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ತಿ.ರಾಮಕೃಷ್ಣಯ್ಯ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಾಹಿತಿ ಡಾ.ಮಳಲಿ ವಸಂತಕುಮಾರ್ ಸಮ್ಮೇಳನಾಧ್ಯಕ್ಷರಾಗಿದ್ದು, ಕರ್ನಾಟಕ ರತ್ನ ನಾಡೋಜ ಡಾ.ದೇ.ಜವರೇಗೌಡರು ಸಮ್ಮೇಳನ ಉದ್ಘಾಟನೆ ಹಾಗೂ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ ಡಾ.ಮಳಲಿಯವರ ಈಡು ಕಥಾ ಸಂಕಲನ ಬಿಡುಗಡೆ ಮಾಡಲಿದ್ದಾರೆ. ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್ ಪುಸ್ತಕ ಪ್ರದರ್ಶನ ಉದ್ಘಾಟಿಸುವರು. ಸಾಹಿತಿ ಬೆಂಗಳೂರಿನ ಯುವಜನ ಸೇವೆ ಇಲಾಖೆ ಕಾರ್ಯದರ್ಶಿ ಡಾ.ಸಿ.ಸೋಮಶೇಖರ್ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು.
ಪತ್ರಕರ್ತ ರವೀಂದ್ರ ಭಟ್ ಐನಕೈ ಅರಳು ಮಲ್ಲಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದರು.
ಮುಂಬೈ ಕರ್ನಾಟಕ ಸಂಘದ ಅಧ್ಯಕ್ಷ ಡಾ.ಜಿ.ಡಿ.ಜೋಷಿ, ಸಾಹಿತಿ ಹಾಗೂ ಸಮಾಜ ಸೇವಕ ಡಿ.ಬಿ.ಬಸವೇಗೌಡ, ಸಮಾಜ ಸೇವಕ ಅಟ್ಟಾವರ ರಾಮದಾಸ್, ಸಮಾಜ ಸೇವಕ ಹಾಗೂ ಕಲಾವಿದ ಡಾ.ಎನ್.ರಾಮರೆಡ್ಡಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷೆ ಲೀಲಾವತಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು.