ಮುಖಂಡರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಅರಸೀಕೆರೆ: ಪಕ್ಷದ ಚುನಾವಣಾ ವೀಕ್ಷಕರಾಗಿ ಬುಧವಾರ ಆಗಮಿಸಿದ್ದ ಜಿಲ್ಲಾ ಕಾಂಗ್ರೆಸ್ ಪ್ರಭಾರ ಅಧ್ಯಕ್ಷೆ ಚಂದ್ರಕಲಾ ಹಾಗೂ ರಾಜ್ಯ ಕಾರ್ಯದರ್ಶಿ ಎಸ್.ಎಂ.ಆನಂದ್ ಅವರ ಸಮ್ಮುಖದಲ್ಲಿ ತಾಲೂಕಿನ ವೀರಶೈವ ಸಮುದಾಯದ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಜಿಲ್ಲೆಯಲ್ಲಿ ಸಾಮಾಜಿಕ ನ್ಯಾಯ ನೀಡಲು ವಿಫಲವಾಗಿರುವ ಜಿಲ್ಲಾ ಹಾಗೂ ರಾಜ್ಯ ಕಾಂಗ್ರೆಸ್ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದು ವೀಕ್ಷಕರಾಗಿ ಬಂದವರು ಮುಜುಗರದ ಪರಿಸ್ಥಿತಿಯನ್ನು ಎದುರಿಸಬೇಕಾಯಿತು. ಕ್ಷೇತ್ರ ವಿಂಗಡಣೆಯ ಪರಿಣಾಮ ಗಂಡಸಿ ಅರಸೀಕೆರೆಗೆ ಸೇರ್ಪಡೆಗೊಂಡು 5 ವರ್ಷ ಕಳೆದಿವೆ. ಇದನ್ನೇ ನೆಪ ಮಾಡಿಕೊಂಡ ವ್ಯಕ್ತಿಯೊಬ್ಬರು ಸಾಮಾಜಿಕ ನ್ಯಾಯ ನೀಡುವುದಾಗಿ ಹೇಳಿಕೊಳ್ಳುತ್ತಾ ತಾವೇ ಅಭ್ಯರ್ಥಿಯಾಗಿದ್ದಾರೆ. ಜಿಲ್ಲೆಯ 7 ಕ್ಷೇತ್ರಗಳಲ್ಲಿ ಮೀಸಲು ಕ್ಷೇತ್ರ ಹೊರತುಪಡಿಸಿ 6 ಕ್ಷೇತ್ರಗಳಲ್ಲಿ ಕೇವಲ ಒಂದು ಸಮುದಾಯಕ್ಕೆ ಮೀಸಲಿಟ್ಟಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.